ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 864774 ಮತದಾರರು

ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.31:- ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ 1-01-2024ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 864774 ಮತದಾರರಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಭಾವಚಿತ್ರವಿರುವ ಮತದಾರರಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಕರಡು ಮಾತದಾರರ ಪಟ್ಟಿ ಪ್ರಕಟಿಸಿರುವ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಈ ವಿವರ ನೀಡಿದರು.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಯಂತೆ ಒಟ್ಟು 427599 ಪುರುಷರು, 437110 ಮಹಿಳೆಯರು, 65 ಇತರರು ಸೇರಿದಂತೆ ಒಟ್ಟಾರೆ 864774 ಮತದಾರರು ಇದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 112334 ಪುರುಷರು, 110324 ಮಹಿಳೆಯರು, 16 ಇತರರು ಸೇರಿ 222674 ಮತದಾರರಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 107159 ಪುರುಷರು, 110141 ಮಹಿಳೆಯರು, 17 ಇತರರು ಸೇರಿ 217317 ಮತದಾರರಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 103032 ಪುರುಷರು, 107632 ಮಹಿಳೆಯರು, 15 ಇತರರು ಸೇರಿ 210679 ಮತದಾರರಿದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 105074 ಪುರುಷರು, 109013 ಮಹಿಳೆಯರು, 17 ಇತರರು ಸೇರಿ 214104 ಮತದಾರರಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರು ತಿಳಿಸಿದರು.
ಪುನರ್ ವಿಂಗಡಣೆ ಪೂರ್ವದಲ್ಲಿ ಒಟ್ಟಾರೆ 982 ಮತಗಟ್ಟೆಗಳಿದ್ದವು. ಪುನರ್ ವಿಂಗಡಣೆ ನಂತರ 983 ಮತಗಟ್ಟೆಗಳಿವೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಪುನರ್ ವಿಂಗಡಣೆ ಪೂರ್ವದಲ್ಲಿ 253 ಮತಗಟ್ಟೆಗಳಿದ್ದು ಪುನರ್ ವಿಂಗಡಣೆ ನಂತರ 254 ಮತಗಟ್ಟೆಗಳಿವೆ. ಉಳಿದಂತೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 241, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 239, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿವೆ ಎಂದರು.
ಕರಡು ಮತದಾರರ ಪಟ್ಟಿ ಸಂಬಂಧ ಆಯಾ ತಾಲೂಕಿನ ಮತಗಟ್ಟೆಗಳಲ್ಲಿ ಬಿ.ಎಲ್‍ಒ ಮೂಲಕ ಹಾಗೂ ಆಯಾ ತಾಲೂಕು ಕಚೇರಿಯಲ್ಲಿ ನವೆಂಬರ್ 9 ರವರೆಗೂ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ಈ ಅವಧಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಬಿಡತಕ್ಕವು, ತಿದ್ದುಪಡಿ ಮತ್ತು ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‍ಒ) ಮೂಲಕ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರ್ ಕಚೇರಿಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಡಿಸೆಂಬರ್ 26ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುತ್ತದೆ. 2024ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರು ತಿಳಿಸಿದರು.
ಚುನಾವಣಾ ಆಯೋಗವು ಹಿಂದಿನ ಸಾಲುಗಳಲ್ಲಿ 1ನೇ ಜನವರಿಯನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಕೈಗೊಳ್ಳುತ್ತಿತ್ತು. ಪ್ರಸ್ತುತ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ತ್ರೈಮಾಸಿಕವಾಗಿ ವರ್ಷಕ್ಕೆ 4 ಅವಕಾಶಗಳನ್ನು ನೀಡಲಾಗಿದೆ. 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ, 1ನೇ ಅಕ್ಟೋಬರ್ ಅನ್ನು ಮತದಾರರಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಹತಾ ದಿನಾಂಕವಾಗಿ ಪರಿಗಣಿಸಲಾಗಿದೆ. ಈ ಯಾವುದೇ ದಿನಾಂಕದಂದು ಅಥವಾ ಅದಕ್ಕೂ ಮೊದಲು 18 ವರ್ಷ ಪೂರೈಸಿದ್ದರೆ ಹಾಗೂ 17 ವರ್ಷ ತುಂಬಿರುವ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಬಿಎಲ್.ಒ ಮೂಲಕ ಅಥವಾ ವಿ.ಎಚ್.ಎ (ಗಿಊಂ) ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ನವೆಂಬರ್ 18, 19 ಹಾಗೂ ಡಿಸೆಂಬರ್ 2 ಮತ್ತು 3ರಂದು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ. ವಿಶೇಷ ಆಂದೋಲನ ದಿನದಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿರುತ್ತಾರೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಬಿಡತಕ್ಕವು, ತಿದ್ದುಪಡಿ, ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಆಯಾ ಮತಗಟ್ಟೆಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಸೇರ್ಪಡೆಯಾಗದಿದ್ದಲ್ಲಿ ಅಂತಹವರಿಂದ ನಮೂನೆ 6ರಲ್ಲಿ ಅರ್ಜಿ ಪಡೆದು ಹೆಸರು ಸೇರ್ಪಡೆಗೊಳಿಸಲು ಕ್ರಮವಹಿಸಲಾಗುತ್ತದೆ. ಅಲ್ಲದೇ ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಆಪ್ (ಗಿಊಂ) ಮುಖಾಂತರವು ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಬಹುದಾಗಿದೆ.
ಯಾವುದೇ ಅರ್ಹ ಮತದಾರರು ಮತದಾನದಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ ಶೇ. 100ರಷ್ಟು ದೋಷರಹಿತ ಮತದಾರರ ಪಟ್ಟಿ ತಯಾರಿಸಬೇಕಾಗಿರುವುದರಿಂದ ರಾಜಕೀಯ ಪಕ್ಷಗಳ ಪತ್ರಿನಿಧಿಗಳು ಮತದಾರರ ಪಟ್ಟಿ ತಯಾರಿಕೆಗೆ ಸಂಪೂರ್ಣ ಸಹಕರಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮನವಿ ಮಾಡಿದರು.
ಇದೇ ವೇಳೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿಯವರು ವಿತರಿಸಿದರು.
ಚುನಾವಣಾ ಶಿರಸ್ತೇದಾರ್ ಬಸವರಾಜು, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಸ್. ಬಾಲಸುಬ್ರಹ್ಮಣ್ಯ, ಎಂ. ಚಿಕ್ಕಮಹದೇವ, ಎನ್. ನಾಗಯ್ಯ, ಎಸ್. ಮಹೇಶ್ ಗೌಡ, ಬ್ಯಾಡಮೂಡ್ಲು ಬಸವಣ್ಣ, ಹರೀಶ್.ಕೆ, ಇತರರು ಸಬೆಯಲ್ಲಿ ಉಪಸ್ಥಿತರಿದ್ದರು.