ಕರಾವಳಿ ಮಲೆನಾಡಿನಲ್ಲಿ ಎನ್‌ಡಿಆರ್‌ಎಫ್ ನಿಯೋಜನೆ


ಬೆಂಗಳೂರು,ಜೂ.೯-ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಸಾಧಾರಣ ಇಲ್ಲವೇ ಮಳೆಯಾಗಲಿದೆ.
ನಾಳೆಯಿಂದ ೨ ದಿನ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಸಾಮಾನ್ಯ ಮಳೆ ಸುರಿಯಲಿದ್ದು, ಜೂನ್ ೧೦ ಮತ್ತು ೧೧ರಂದು ಭಾರೀ ಮಳೆಯಾಗಲಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎನ್ ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಮುಂಗಾರು ಆಗಮನವಾದ ಹಿನ್ನೆ
ಲೆಯಲ್ಲಿ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಜೂನ್ ೩ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಮಲೆನಾಡು, ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ. ನಗರದಲ್ಲಿ ಕಳೆದೆರಡು ದಿನಗಳಿಂದ ಮಳೆಯ ಸಿಂಚನವಾಗುತ್ತಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಲೆನಾಡಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ.
ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕ, ಛತ್ತೀಸ್‌ಘಡ, ಕೇರಳ, ಮಾಹೆ, ಗೋವಾ, ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.
ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಮಳೆಯ ಆರ್ಭಟವಿರಲಿದ್ದು ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.