ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಜಯ: ಖರ್ಗೆ ವಿಶ್ವಾಸ

ನವದೆಹಲಿ,ಮಾ.29-ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಗೆಲುವು ಸಾಧಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಗೆಲ್ಲುವ ಅಭ್ಯರ್ಥಿಗಳ ಅಭಿಪ್ರಾಯದೊಂದಿಗೆ ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆಯನ್ನು ನಿರ್ಧರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಪಕ್ಷದ ಬಲ ಮತ್ತಷ್ಟು ಹೆಚ್ಚಿಸಿಕೊಳ್ಳಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪ್ರಚಾರ ನಡೆಸಲಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲ್ಲುವ ಎಲ್ಲ ಸಾಧ್ಯತೆಗಳಿವೆ ಎಂದರು.
ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಜನರು ಮುಂದಿಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಇದನ್ನು ಅರಿತು ಪ್ರಧಾನಿ ತಮ್ಮ ಸಂಪುಟದ ಸಚಿವರನ್ನು ಕರ್ನಾಟಕಕ್ಕೆ ಕಳುಹಿಸುತ್ತಿದ್ದಾರೆ. ಅಲ್ಲದೇ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರು
ರಾಜ್ಯಕ್ಕೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಕಾಂಗ್ರೆಸ್​ ಪಕ್ಷದ ಹಿಂದೆ ಬಿದ್ದಿದ್ದಾರೆ ಎಂದು ಖರ್ಗೆ ಲೇವಡಿ ಮಾಡಿದರು.