ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸಲು ಶ್ರಮಿಸೋಣ

ಗದಗ,ನ 4 : ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಮುಂದುವರಿಯಲು ಎಲ್ಲರೂ ಶ್ರಮಿಸಬೇಕು ಎಂದು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಶುಕ್ರವಾರ ಜರುಗಿದ ಮೈಸೂರು ರಾಜ್ಯಕ್ಕೆ ಕರ್ನಾಟಕ ಮರುನಾಮಕರಣ ಸುವರ್ಣ ಮಹೋತ್ಸವದ ಕರ್ನಾಟಕ ಸಂಭ್ರಮ-50 ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಕರ್ನಾಟಕ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಈ ಶುಭಗಳಿಗೆ ಹೆಮ್ಮೆಯ ವಿಷಯವಾಗಿದೆ. ಅನೇಕ ಜನರ ತ್ಯಾಗ ಬಲಿದಾನ ಹಾಗೂ ಸಹಕಾರದಿಂದ ಕರ್ನಾಟಕ ರೂಪುಗೊಂಡಿದೆ ಎಂಬ ಸಂಗತಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ನಾಡಿನ ಸರ್ವ ಜನಾಂಗದ ಜನರು ಪರಸ್ಪರ ಶಾಂತಿ ನೆಮ್ಮದಿಯಿಂದ ಬಾಳುವಂತಾಗಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರು ಮಾತನಾಡಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಆಚರಣೆ ನಿಮಿತ್ತ ನವೆಂಬರ್ 1 ರಿಂದ ಮುಂದಿನ ವರ್ಷ ಅಕ್ಟೋಬರ್ 31 ರವರೆಗೆ ರಾಜ್ಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಸವಿನೆನಪಿಗಾಗಿ ರಾಜ್ಯ ಸರ್ಕಾರವು ಅಂಚೆ ಚೀಟಿ ಹಾಗೂ ನಾಣ್ಯಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ. ಕನ್ನಡ ನಾಡು ನುಡಿ ಜಲ ವಿಷಯ ಸೇರಿದಂತೆ ಕನ್ನಡಿಗರ ಅಭಿಮಾನ ಹೆಚ್ಚಿಸುವ ಕಾರ್ಯಕ್ರಮಗಳನ್ನು ವರ್ಷಪೂರ್ತಿ ನಡೆಸಲಾಗುವುದು ಎಂದರು.

1973ರಲ್ಲಿ ಮೈಸೂರು ರಾಜ್ಯ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡಿತು. ಅಂದಿನ ಮುಖ್ಯಮಂತ್ರಿ ದಿ. ದೇವರಾಜ ಅರಸ್ ಹಾಗೂ ಮಾಜಿ ಸಚಿವ ದಿ. ಕೆ ಎಚ್ ಪಾಟೀಲ ಅವರ ನೇತೃತ್ವದಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯ ಎಂದು ನಾಮಕರಣ ಎಂದು ಗದಗ ನಗರದಲ್ಲಿ ಠರಾವು ಪಾಸು ಮಾಡಿದ್ದು ಇತಿಹಾಸದಲ್ಲಿದೆ. ಕರ್ನಾಟಕ ನಾಮಕರಣಕ್ಕೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅನೇಕ ಸಾಧಕರಿಗೆ ಸನ್ಮಾನಿಸಲಾಗಿದೆ. ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುಮಾರಸವ್ಯಾಸ ರಚಿತ ಗದುಗಿನ ಭಾರತ ಪುಸ್ತಕವನ್ನು ಮರುಮುದ್ರಿಸಿ ಕಡಿಮೆ ದರದಲ್ಲಿ ಜನರಿಗೆ ನೀಡಲಾಗುವುದು. ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗುವುದು. ಕನ್ನಡದ ಕೈಂಕರ್ಯ ಮಾಡುವಂತಹ ಅವಕಾಶ ಸಿಕ್ಕಿರುವ ನಾನೇ ಪುಣ್ಯವಂತ ಎಂದು ಹೇಳಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಪೌರಾಡಳಿತ ಸಚಿವ ರಹೀಂಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಉಪ ಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಜಿ.ಎಸ್.ಪಾಟೀಲ್, ಶ್ರೀನಿವಾಸ ಮಾನೆ, ಎಸ್.ವಿ.ಸಂಕನೂರು,ಬಸವರಾಜ ಶಿವಣ್ಣವರ, ಜೆ.ಟಿ.ಪಾಟೀಲ್, ಎನ್.ಎಚ್.ಕೊನರಡ್ಡಿ, ಮಾಜಿ ಲೋಕಸಭಾ ಸದಸ್ಯ ಮಂಜುನಾಥ ಕುನ್ನೂರ, ಐ.ಜಿ.ಸನದಿ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಶಾಸಕರುಗಳಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದ್ದೇವರಮಠ,ಬಿ.ಆರ್.ಯಾವಗಲ್, ರಾಮಣ್ಣ ಲಮಾಣಿ, ನಂಜಯ್ಯನಮಠ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.