ಕರ್ನಾಟಕ ಸೇರಿ ಹಲವೆಡೆ ಭಾರೀ ಮಳೆ

ನವದೆಹಲಿ,ಮೇ.೩- ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಪೂರ್ವ ಭಾರತದ ಭಾಗದಲ್ಲಿ ಗುಡುಗು, ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಬಯಲು ಸೀಮೆ, ತಗ್ಗು ಮತ್ತು ಮಧ್ಯ ಗುಡ್ಡಗಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ. ಮೇ ೬ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ೧೨ ಜಿಲ್ಲೆಗಳ ಹಲವಾರು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನು ಮೂರ್ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಇಂದು ದೆಹಲಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದೆ. ನಿನ್ನೆ ರಾಷ್ಟ್ರ ರಾಜಧಾನಿಯಲ್ಲಿ ೧೫ ಮಿ.ಮೀ ಮಳೆ ದಾಖಲಾಗಿದೆ. ಮುಂದಿನ ಐದು ದಿನಗಳಲ್ಲಿ ಪಶ್ಚಿಮ ಭಾರತದಲ್ಲಿ ಸಾಧಾರಣ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಮೇ ೨ ಮತ್ತು ೪ ರಂದು ಆಲಿಕಲ್ಲು ಮಳೆ ಬೀಳಬಹುದು ಎಂದು ತಿಳಿಸಿದೆ. ಇದಲ್ಲದೇ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಂತಹ ಈಶಾನ್ಯ ಭಾಗಗಳಲ್ಲಿ ಮೇ ೨ ರಿಂದ ೪ ರ ಅವಧಿಯಲ್ಲಿ ಭಾರೀ ಮಳೆಯಾಗಲಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಮುಂದಿನ ೫ ದಿನಗಳವರೆಗೆ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದೆ.
ದೇಶದ ಹಲವು ಭಾಗಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗಿದೆ. ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹಲವೆಡೆ ಮಳೆ ಸುರಿದಿದೆ. ಪಂಜಾಬ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಕೆಲವೆಡೆ ಮಳೆಯಾಗಿದೆ.