ಕಲಬುರಗಿ.ಮೇ,30: ನಗರದಲ್ಲಿ ಅತ್ಯಂತ ಅಗತ್ಯವಾಗಿರುವ ಮೂರು ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು.
ಸಚಿವರಾಗಿ ನಗರಕ್ಕೆ ಮೊದಲ ಬಾರಿಗೆ ಆಗಮಿಸಿದ ನಂತರ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರದಲ್ಲಿ ಥ್ರಾಮಾ ಸೆಂಟರ್, ತಾಯಿ ಮಗು ಆಸ್ಪತ್ರೆ ಹಾಗೂ ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವ ಯೋಜನೆ ಇದ್ದು, ಆ ಕುರಿತು ಚರ್ಚಿಸಿ ಶೀಘ್ರದಲ್ಲಿಯೇ ಮೂರು ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಲಾಗಿದೆ. ಈಗಿರುವ ಆಸ್ಪತ್ರೆಯ ಪಕ್ಕದಲ್ಲಿಯೇ ಲಭ್ಯ ಇರುವ ಒಂದು ಎಕರೆ ಜಾಗವನ್ನು ಆಸ್ಪತ್ರೆಗೆ ಬಳಸಿಕೊಳ್ಳುವ ಯೋಚನೆ ಇದೆ ಎಮದು ಹೇಳಿದ ಅವರು, ಕಿದ್ವಾಯಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯ ಕುರಿತು ನನ್ನ ಗಮನಕ್ಕೆ ಬಂದಿದೆ. ಕೂಡಲೇ ಹೆಚ್ಚುವರಿ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಳ್ಳುವೆ ಹಾಗೂ ಪ್ರತ್ಯೇಕ ಆಮ್ಲಜನಕ ಘಟಕವನ್ನು ಕೂಡ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ್ ಖರ್ಗೆಯವರು ಈಗಾಗಲೇ ಹತ್ತು ಅಂಶಗಳ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಿಸಿದ್ದು, ರಾಜ್ಯ ಸರ್ಕಾರವು ಅದನ್ನು ಜಾರಿಗೆ ತರಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್, ಶಾಸಕರಾದ ಬಿ.ಆರ್. ಪಾಟೀಲ್, ಕನೀಜ್ ಫಾತಿಮಾ, ಎಂ.ವೈ. ಪಾಟೀಲ್, ಅಲ್ಲಮಪ್ರಭು ಪಾಟೀಲ್, ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಶಿವಾನಂದ್ ಪಾಟೀಲ್, ಶರಣು ಮೋದಿ ಮುಂತಾದವರು ಉಪಸ್ಥಿತರಿದ್ದರು.