ಕಲಬುರಗಿ,ಜೂ.20-ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2015ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಫೌಜಿಯಾ ತರುನ್ನುಮ್ ಅವರನ್ನು, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ 2017ನೇ ಬ್ಯಾಚ್‍ನ ಅಧಿಕಾರಿ ಭನ್ವರ್ ಸಿಂಗ್ ಮೀನಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಯಾಗಿದ್ದ ಯಶವಂತ್ ಗುರುಕರ್ ಮತ್ತು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಡಾ.ಗಿರೀಶ್ ಬದೋಲೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅವರಿಗೆ ಸದ್ಯ ಯಾವುದೇ ಸ್ಥಳ ತೋರಿಸಿಲ್ಲ.
ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಫೌಜಿಯಾ ತರನ್ನುಮ್ ಅವರು ಈ ಮೊದಲು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಕೊಪ್ಪಳದಲ್ಲಿ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕೆಪಿಎಸ್‍ಸಿ ಪರೀಕ್ಷಾ ನಿಯಂತ್ರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ನೂತನ ಜಿಪಂ ಸಿಇಒ ಆಗಿ ನೇಮಕಗೊಂಡಿರುವ ಭನ್ವರ್ ಸಿಂಗ್ ಮೀನಾ ಅವರು ಬಾಗಲಕೋಟೆಯ ಕೃಷ್ಣ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಪುನರ್ವಸತಿ ಮತ್ತು ಪುನರ್ವಸತಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.