
ಬೆಂಗಳೂರು, ನ. ೨- ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಮತ್ತು ಸುರ್ಜೇವಾಲ ಅವರು ಕಲೆಕ್ಷನ್ ಮಾಡಲು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಎಟಿಎಂ ಆಗಿದೆ ಎಂದು ಮಾಜಿ ಮುಖ್ಯಯಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇಣುಗೋಪಾಲ್ ಮತ್ತು ಸುರ್ಜೇವಾಲ ಅವರು ಕಲೆಕ್ಷನ್ ಮಾಡಲು ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಎಲ್ಲರಿಗೂ ಮನವರಿಕೆಯಾಗಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಎಟಿಎಂ ಆಗಿದೆ. ಕಲೆಕ್ಷನ್ ಟಾರ್ಗೆಟ್ ನೀಡಲು ಕೇಂದ್ರದ ಕಾಂಗ್ರೆಸ್ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಹರಿಹಾಯ್ದರು.
ಎಲ್ಲ ರಂಗದಲ್ಲೂ ವಿಫಲ: ಕೇಂದ್ರದ ಮೇಲೆ ಅನಗತ್ಯ ಆರೋಪ
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸಂಪನ್ಮೂಲ ಕೊರತೆಯಿಂದ ಈ ಸರ್ಕಾರ ಬಳಲುತ್ತಿದೆ. ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಅನಗತ್ಯ ಆರೋಪ ಹೊರಿಸುತ್ತಿದೆ ಎಂದು ಯಡಿಯೂಪ್ಪ ಕಿಡಿಕಾರಿದರು.
ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಹೊರತುಪಡಿಸಿ ಉಳಿದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿಲ್ಲ. ವಿದ್ಯುತ್ ದರವನ್ನು ಹೆಚ್ಚಳ ಮಾಡಿದ್ದಾರೆ. ಜತೆಗೆ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಒದಗಿಸಲು ರೈತರೇ ಹಣ ಭರಿಸಬೇಕು ಎಂಬ ಆದೇಶವನ್ನು ಹೊರಡಿಸಿದ್ದಾರೆ. ಇದು ರೈತ ವಿರೋಧಿಯಾಗಿದೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಶಾಸಕರ ೨ ಕೋಟಿ ರೂ. ಅನುದಾನದಲ್ಲಿ ೫೦ ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅನುದಾನ ಬಿಡುಗಡೆಯಾಗಿಲ್ಲ. ನಿಗಮಗಳಿಗೂ ಒಂದು ಪೈಸೆ ಹಣ ಕೊಟ್ಟಿಲ್ಲ ಎಂದು ಟೀಕಿಸಿದರು.
ಮೊದಲೆಲ್ಲಾ ಬರಪರಿಸ್ಥಿತಿ ಬಂದಾಗ ಕೇಂದ್ರದ ಅನುದಾನಕ್ಕೆ ಕಾಯದೆ ರಾಜ್ಯ ಸರ್ಕಾರ ಕಾಮಗಾರಿಗಳನ್ನು ಕೈಗೊಳ್ಳುತ್ತಿತ್ತು. ಕೇಂದ್ರದಿಂದ ಅನುದಾನ ಬರುವುದು ನಿಶ್ಚಿತ. ಹಾಗಾಗಿ ಕಾಮಗಾರಿಗಳನ್ನು ಕೈಗೊಂಡು ಕೇಂದ್ರದ ಅನುದಾನ ಬಂದ ನಂತರ ಅದನ್ನು ಸರಿ ಮಾಡಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ಸಂಪನ್ಮೂಲ ಕೊರತೆಯಿಂದ ಬಳಲುತ್ತಿರುವುದರಿಂದ ಕೇಂದ್ರದ ಅನುದಾನಕ್ಕೆ ಕಾಯುತ್ತಾ ಕುಳಿತಿದೆ. ಕೇಂದ್ರ ಸರ್ಕಾರ ಅನುದಾನ ನೀಡುವುದು ನಿಶ್ಚಿತ. ಇಷ್ಟಾದರೂ ಕೇಂದ್ರದ ಮೇಲೆ ಆರೋಪ ಮಾಡುವ ಚಾಳಿಯನ್ನು ಈ ಸರ್ಕಾರ ರೂಢಿಸಿಕೊಂಡಿದೆ. ತಮ್ಮ ವೈಫಲ್ಯಗಳನ್ನು ಮರೆಮಾಚಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ ಎಂದು ಹರಿಹಾಯ್ದರು.
ಈ ಸರ್ಕಾರದಲ್ಲಿ ಒಳ ಜಗಳ ಇದೆ. ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವೆ ತಿಕ್ಕಾಟವಿದೆ. ದಿನ ಬೆಳಗಾದರೆ ಕಾಂಗ್ರೆಸ್‌ನವರು ನಾಯಿ-ನರಿಗಳಂತೆ ಕಚ್ಚಾಡುತ್ತಿದ್ದಾರೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಕ್ಷ ಹಾಗೂ ಸರ್ಕಾರದ ಮೇಲೆ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ತನ್ನ ಯೋಜನೆಗಳ ಜಾರಿಗೆ ಭರಪೂರ ಅನುದಾನ ನೀಡಿದೆ. ಇಷ್ಟಾದರೂ ಸಿದ್ಧರಾಮಯ್ಯ ಆರೋಪ ಮಾಡುತ್ತಿದ್ದಾರೆ. ಅವರಿಗೆ ಅನುದಾನದ ಬಗ್ಗೆ ಮಾಹಿತಿ ಇಲ್ಲವೇ ಎಂದು ಹರಿಹಾಯ್ದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರುಗಳಾದ ಗೋವಿಂದ ಕಾರಜೋಳ ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ, ಶಾಸಕರಾದ ಎಸ್.ಆರ್. ವಿಶಾನಾಥ್, ಎಸ್. ರಘು, ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಎಸ್. ಮುನಿರಾಜು, ಎನ್. ರವಿಕುಮಾರ್, ಸಂಸದ ಲೆಹರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.
ಆಪರೇಷನ್ ಕಮಲ: ತನಿಖೆ ಮಾಡಿಸಲಿ, ಬೇಜಾವಾಬ್ದಾರಿ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಬೇಜವಾಬ್ದಾರಿ ಹೇಳಿಕೆಯಾಗಿದೆ. ಈ ರೀತಿ ಮಾತನಾಡುವುದು ಸರಿಯಲ್ಲ. ಬೇಕಾದರೆ ತನಿಖೆ ಮಾಡಿಸಲಿ ಎಂದು ಯಡಿಯೂರಪ್ಪ ಸವಾಲು ಹಾಕಿದರು.
ರಾಜ್ಯದಲ್ಲಿ ವಿಪಕ್ಷ ನಾಯಕನ ಆಯ್ಕೆ ಹಾಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಎರಡೂ ನಿರ್ಧಾರಗಳು ತಡವಾಗಿದೆ. ಆದಷ್ಟು ಬೇಗ ನೇಮಕಾತಿ ಮಾಡುವಂತೆ ವರಿಷ್ಠರನ್ನು ಒತ್ತಾಯಿಸಿದ್ದೇವೆ. ಮುಂದಿನ ವಿಧಾನಸಭಾ ಅಧಿವೇಶನದ ವೇಳೆಗೆ ವಿಪಕ್ಷ ನಾಯಕರ ನೇಮಕ ಆಗುವುದು ನೂರಕ್ಕೆ ನೂರರಷ್ಟು ನಿಶ್ಚಿತ ಎಂದು ಅವರು ಹೇಳಿದರು.
ಪಕ್ಷದ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಯಾರನ್ನಾದರೂ ಮಾಡಲಿ, ಬೇಗ ಮಾಡಿ ಎಂಬುದಷ್ಟೇ ನನ್ನ ಒತ್ತಾಯ ಎಂದರು.
ಝಡ್ ಪ್ಲಸ್ ಭದ್ರತೆ ವಾಪಸ್ಸಾತಿಗೆ ಮನವಿ
ಕೇಂದ್ರ ಗೃಹ ಸಚಿವಾಲಯ ತಮಗೆ ಝಡ್ ಪ್ಲಸ್ ಭದ್ರತೆ ನೀಡಿದೆ. ಈ ಭದ್ರತೆಯಿಂದ ಜನ ನನ್ನ ಬಳಿ ಬರಲು ಸಾಧ್ಯವಾಗುತ್ತಿಲ್ಲ. ನಾನು ಜನರ ಜತೆ ಇರುವವನು, ಹಾಗಾಗಿ ಕೇಂದ್ರ ಗೃಹ ಸಚಿವರಿಗೆ ಭದ್ರತೆ ವಾಪಸ್ ಪಡೆದು ಮೊದಲು ಇದ್ದ ಭದ್ರತೆಯನ್ನೇ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.