`ಕಲ್ಜಿಗ’  ಚಿತ್ರದ ಪೋಸ್ಟರ್ ಅನಾವರಣ

ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ.. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.

ನಾದಬ್ರಹ್ಮ ಹಂಸಲೇಖ ಸಮ್ಮುಖದಲ್ಲಿ ಕಲ್ಜಿಗದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆಗೊಂಡಿದೆ. ಸುಮನ್ ಸುವರ್ಣ ನಿರ್ದೇಶನ ಮಾಡಿದ್ದಾರೆ. ಬಹು ಕಾಲದ ನಂತರ ನಾದಬ್ರಹ್ಮ ಹಂಸಲೇಖ  ಸಿನಿಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮರಳಿದ್ದಾರೆ. ಗೀತರಚನೆಯತ್ತಲೂ ಹೊರಳಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಹಂಸಲೇಖ  ನಲವತ್ತಕ್ಕೂ ಹೆಚ್ಚು ಸಿನಿಮಾಗಳ ಆಫರ್ ಗಳನ್ನು ತಿರಸ್ಕರಿಸಿ, ಕಲ್ಜಿಗ ಚಿತ್ರದತ್ತ ಆಕರ್ಷಿತರಾದುದಕ್ಕೆ ಕಾರಣಗಳನ್ನು ಬಿಚ್ಚಿಟ್ಟರು.

ಗಿರ್ ಗಿಟ್, ಸರ್ಕಸ್, ಗಮ್ಜಾಲ್ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ `ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತುಳು ಚಿತ್ರರಂಗದಲ್ಲಿ ಕಿಂಗ್ ಆಫ್ ಆಕ್ಷನ್  ಅರ್ಜುನ್ ಕಾಪಿಕಾಡ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಕನ್ನಡತಿ ಸುಶ್ಮಿತಾ ಭಟ್ ನಾಯಕಿ.ಶರತ್ ಕುಮಾರ್ ಎ.ಕೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಈಗಾಗಲೇ ಉಡುಪಿ, ಮಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಇದೀಗ ಮುಕ್ಕಾಲು ಭಾಗ ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಸಮಾಪ್ತಿಗೊಂಡಿದೆ. ಮಂಗಳೂರು ಸೀಮೆಯ ಕನ್ನಡ ಭಾಷಾ ಶೈಲಿಯಲ್ಲಿ ತಯಾರಾಗಿರುವ ಈ ಚಿತ್ರವನ್ನು ತುಳುವಿಗೆ ಡಬ್ ಮಾಡಲಾಗಿದೆಯಂತೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ಕಲ್ಜಿಗದಲ್ಲಿದೆಯಂತೆ.

 ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ,`ಕಲ್ಜಿಗ’ಕ್ಕೆ ಕೈ ಜೋಡಿಸಿದ್ದಾರೆ. ಈಗಾಗಲೇ ಕಲ್ಜಿಗ ಸೆಪೆಂಬರ್ ತಿಂಗಳಲ್ಲಿ ತೆರೆಗಾಣೋದು ಖಾತರಿಯಾಗಿದೆ.