ಕಲ್ಪತರುನಾಡಲ್ಲಿ ಶಾ, ರಾಹುಲ್ ಅಬ್ಬರದ ಪ್ರಚಾರ

ತುಮಕೂರು, ಮೇ ೧- ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದ್ದಂತೆ ಕಲ್ಪತರುನಾಡಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಅಖಿಲ ಭಾರತೀಯ ಕಾಂಗ್ರೆಸ್‌ನ ನಾಯಕ ರಾಹುಲ್‌ಗಾಂಧಿಯವರು ಪ್ರತ್ಯೇಕ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡು ಮತ ಬೇಟೆ ನಡೆಸಿದರು.ಜಿಲ್ಲೆಯ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಹುಲ್‌ಗಾಂಧಿ ಅವರು ತಮ್ಮ ಅಭ್ಯರ್ಥಿ ಪರ ಮತಯಾಚಿಸಿದರೆ, ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ತಮ್ಮ ಪಕ್ಷದ ಹುರಿಯಾಳು ಪರ ಮತ ಶಿಕಾರಿ ನಡೆಸಿದರು.
ಅಖಿಲ ಭಾರತೀಯ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಈ ಹಿಂದೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಆರಂಭಿಸಿ ಯಶಸ್ವಿಯಾದ ತುರುವೇಕೆರೆ ಕ್ಷೇತ್ರದಲ್ಲಿಂದು ಕೈ ಅಭ್ಯರ್ಥಿ ಬೆಮೆಲ್ ಕಾಂತರಾಜು ಪರ ಮತ ಯಾಚಿಸಿದರು.ಹೆಲಿಕಾಪ್ಟರ್‌ನಲ್ಲಿ ತುರುವೇಕೆರೆಗೆ ಬಂದಿಳಿದ ರಾಹುಲ್‌ಗಾಂಧಿ ಅವರು ಕಾರಿನಲ್ಲಿ ಬಯಲು ರಂಗಮಂದಿರ ಮೈದಾನಕ್ಕೆ ತೆರಳಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಬಾರಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತರಾಜು ಅವರನ್ನು ಆಶೀರ್ವದಿಸುವಂತೆ ಮತದಾರರಿಗೆ ಮನವಿ ಮಾಡಿದರು.ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ. ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಾಧನೆಯನ್ನು ಹೊರತುಪಡಿಸಿದರೆ ಈ ಸರ್ಕಾರಗಳಿಂದ ಜನಸಾಮಾನ್ಯರಿಗೆ ಯಾವುದೇ ಅನುಕೂಲವಾಗಿಲ್ಲ. ಬದಲಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಈ ಬಾರಿ ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷ ಗ್ಯಾರಂಜಿ ಯೋಜನೆಗಳನ್ನು ಘೋಷಿಸಿದ್ದು, ಅಧಿಕಾರಕ್ಕೆ ಬಂದ ತಕ್ಷಣವೇ ಈ ಯೋಜನೆಗಳು ಜಾರಿಗೆ ಬರಲಿವೆ ಎಂದರು.
ಗುಬ್ಬಿಯಲ್ಲಿ ಅಮಿತ್ ಷಾ ಅಬ್ಬರ
ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಗುಬ್ಬಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇತಿಹಾಸ ಪ್ರಸಿದ್ದ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಂತರ ದೇವಾಲಯದ ಮುಂಭಾಗದಿಂದ ರೋಡ್ ಶೋ ಆರಂಭಿಸಿದ ಅಮಿತ್ ಶಾ ಅವರು ಗುಬ್ಬಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ ನಿಟ್ಟೂರು ಗೇಟ್ ಬಳಿ ಇರುವ ನಾಗಲಿಂಗೇಶ್ವರ ಸ್ವಾಮಿ ದೇವಾಲಯದವರೆಗೆ ಭರ್ಜರಿ ರೋಡ್ ಶೋ ನಡೆಸಿ ತಮ್ಮ ಪಕ್ಷದ ಅಭ್ಯರ್ಥಿ ದಿಲೀಪ್‌ಕುಮಾರ್ ಪರ ಮತಯಾಚಿಸಿದರು.
ಗುಬ್ಬಿಯಲ್ಲಿ ಈ ಬಾರಿ ಕಮಲ ಅರಳಿಸುವಂತೆ ಮತದಾರರಿಗೆ ಮನವಿ ಮಾಡಿದ ಅಮಿತ್ ಷಾ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಕೋರಿದರು.
ಬಿಎಸ್‌ವೈ ಪ್ರಚಾರ
ಜಿಲ್ಲೆಯ ಕುಣಿಗಲ್, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಭೇಟಿ ನೀಡಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.
ಕುಣಿಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಕೃಷ್ಣಕುಮಾರ್, ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಭ್ಯರ್ಥಿ ಬಿ. ಸುರೇಶ್‌ಗೌಡ ಪರ ಮತಯಾಚಿಸಿದ ಬಿ.ಎಸ್. ಯಡಿಯೂರಪ್ಪನವರು, ಈ ಬಾರಿ ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರದಲ್ಲಿ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.
ಸಿದ್ದು ಮತಯಾಚನೆ
ಈಗಾಗಲೇ ಕಲ್ಪತರುನಾಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು, ಮಧುಗಿರಿ, ಪಾವಗಡ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿದರು.