ಕಲ್ಯಾಣ ಕರ್ನಾಟಕ ಅಮೃತ ಉತ್ಸವ-2022ತಿಂಗಳು ಪರ್ಯಂತ ಶಾಲಾ ಕಾಲೇಜುಗಳಲ್ಲಿ ಹಲವು ಸ್ಪರ್ಧೆ

ಕಲಬುರಗಿ: ಜು.19:ಆಜಾದಿ ಅಮೃತ ಮಹೋತ್ಸವದ ಭಾಗವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲ್ಯಾಣ ಕರ್ನಾಟಕ ಅಮೃತ ಉತ್ಸವ -2022 ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಸಿ.ಪಾಟೀಲ್ ರೇವೂರ್ ತಿಳಿಸಿದರು.

ಇಲ್ಲಿನ ಕೆಕೆಆರ್‍ಡಿಬಿ ಕಚೇರಿಯ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ಈಗಾಗಲೇ ತಿಂಗಳು ಪರ್ಯಂತ ಶಾಲಾ-ಕಾಲೇಜುಗಳ ಹಂತದಲ್ಲಿ ವಿವಿಧ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯ ಎಲ್ಲ ಏಳು ಜಿಲ್ಲೆಗಳ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವಂತೆ ಆದೇಶ ಹೊರಡಿಸಲಾಗುವುದು. ಸಂಬಂಧಿಸಿದ ಇಲಾಖೆಯ ವತಿಯಿಂದ ಆರೋಗ್ಯ, ಶಿಕ್ಷಣ ಮತ್ತು ಕ್ರೀಡೆಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ಗ್ರಾಮೀಣ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡೆಗಳನ್ನು ಹಮ್ಮಿಕೊಳ್ಳುವಂತೆ ಕೋರಲಾಗುವುದು ಎಂದರು.


ಮುಂದಿನ ವಾರ ಲಾಂಛನ ಬಿಡುಗಡೆ

ಕಲ್ಯಾಣ ಕರ್ನಾಟಕ ಅಮೃತ ಉತ್ಸವ -2022ಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಂದ ಲಾಂಛನ ಬಿಡುಗಡೆ ಸಮಾರಂಭ ನಡೆಯಲಿದೆ. ಇದಾದ ಬಳಿಕ ಉತ್ಸವಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ತಿಳಿಸಿದರು.

ಇನ್ನು, ಸೆಪ್ಟೆಂಬರ್ 17ರಂದು ಒಂದು ತಿಂಗಳ ಪರ್ಯಂತದ ಉತ್ಸವ ಮುಕ್ತಾಯಗೊಳ್ಳಲಿದೆ. ಅಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಸಚಿವರನ್ನು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ಹಂಚಿಕೊಂಡರು.

ಉತ್ಸವದ ಆಚರಣೆಗೆ ಸಂಬಂಧಿಸಿದಂತೆ ಕೆಕೆಆರ್‍ಡಿಬಿ ವ್ಯಾಪ್ತಿಯ ಎಲ್ಲ ಜಿಲ್ಲೆಗಳಿಗೆ ಎಷ್ಟು ಅನುದಾನದ ಅಗತ್ಯವಿದೆ ಎಂಬುದನ್ನು ಆದಷ್ಟು ಶೀಘ್ರ ನಿರ್ಧರಿಸಿ, ಅಗತ್ಯ ಅನುದಾನ ಬಿಡುಗಡೆ ಮಾಡುವ ಕುರಿತು ಚರ್ಚಿಸಲಾಗುವುದು ಎಂದರು.


ಶೇ.97ರಷ್ಟು ಅನುದಾನ ಖರ್ಚು

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯ ನಗರ ಜಿಲ್ಲೆಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಇತ್ತೀಚೆಗೆ ಪ್ರಗತಿ ಪರಿಶೀಲನಾ ಸಭೆ ಕೈಗೊಳ್ಳಲಾಗಿದೆ. ಕಳೆದ 2013-14ರಿಂದ 2021-22ರವರೆಗೆ ಒಟ್ಟು ಶೇ.97ರಷ್ಟು ಅನುದಾನ ಖರ್ಚು ಮಾಡಲಾಗಿದೆ ಎಂದು ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ಮಾಹಿತಿ ನೀಡಿದರು.

ಈವರೆಗೆ ರಾಜ್ಯ ಸರಕಾರದಿಂದ ರೂ.11,878.33 ಕೋಟಿ ಅನುದಾನ ಹಂಚಿಕೆಯಾಗಿದ್ದು, ಈ ಪೈಕಿ ರೂ.7328.80 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ, ರೂ.7107.47 ಕೋಟಿ ಅನುದಾನ ಖರ್ಚು ಮಾಡಲಾಗಿದೆ ಎಂದು ಅವರು ವಿವರ ನೀಡಿದರು.

ಪ್ರತಿ ವರ್ಷ ಸರಕಾರದಿಂದ ಹಂಚಿಕೆಯಾದ ಅನುದಾನಕ್ಕೆ ಆಯಾ ಜಿಲ್ಲೆಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳಿಗೆ ಮಂಜೂರಾತಿ ನೀಡುತ್ತಾ ಬರಲಾಗುತ್ತಿದೆ. 2022-23ನೇ ಸಾಲಿನ ಕ್ರಿಯಾ ಯೋಜನೆಗೆ ಏಪ್ರಿಲ್ -2022ರ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಕ್ರಿಯಾ ಯೋಜನೆ ಮಂಜೂರಾತಿ ನೀಡಲಾಗಿದೆ ಎಂದರು.

ಇನ್ನು, ತಾವು ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ರೂ.50 ಕೋಟಿ ಮೊತ್ತದ ನಿವೇಶನ ಖರೀದಿಸಲಾಗಿದೆ. ಆ ನಿವೇಶನದಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲಾ ವ್ಯಾಪ್ತಿಯ ವಿದ್ಯಾಥಿಗಳು ಯುಪಿಎಸ್ಸಿ-ಕೆಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿಯ ಕಣ್ಣಿ ಮಾರುಕಟ್ಟೆಯಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಇಷ್ಟರಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ. ಈ ವಾಣಿಜ್ಯ ಸಂಕೀರ್ಣಕ್ಕೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಜೊತೆಗೆ ಕೆಕೆಆರ್‍ಡಿಬಿ ಸಹ ಅನುದಾನ ಒದಗಿಸುತ್ತಿದೆ. ರಾಯಚೂರಿನಲ್ಲಿ ಏರ್‍ಪೋರ್ಟ್ ನಿರ್ಮಾಣ ಕಾಮಗಾರಿಗೂ ಕೆಕೆಆರ್‍ಡಿಬಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ಸುಮಾರು 60 ಎಕರೆ ಪ್ರದೇಶದಲ್ಲಿ ಬೃಹತ್ ಕ್ರೀಡಾ ಮತ್ತು ಸಾಂಸ್ಕøತಿಕ ಗ್ರಾಮ ನಿರ್ಮಾಣಕ್ಕೆ ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅನುಮತಿ ದೊರೆತ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ನುಡಿದರು.

ಕೆಕೆಆರ್‍ಡಿಬಿ ವತಿಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮಂಡಳಿಯದ್ದೇ ಸ್ವಂತ ಇಂಜಿನಿಯರಿಂಗ್ ವಿಭಾಗ ಆರಂಭಕ್ಕೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳಿಂದ ಅನುಮತಿ ದೊರೆಯುವ ನಿರೀಕ್ಷೆಯಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.