ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಲ್ಲಿ ಮುಖ್ಯಮಂತ್ರಿಗಳಿಂದ 5000 ಕೋಟಿ ರೂ.ಗಳ ಅನುದಾನ ಘೋಷಣೆ: ನಮೋಶಿ ಸಂತಸ

ಕಲಬುರಗಿ,ಸೆ.17: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಂದು ಈ ಭಾಗಕ್ಕೆ 5000 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ರಾಜ್ಯ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಅಭಿನಂದಿಸಿದ್ದಾರೆ.
2022-2023ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶವು (ಹೈದ್ರಾಬಾದ್ ಕರ್ನಾಟಕ) ಸ್ವಾತಂತ್ರ್ಯ ಗಳಿಸಿ 74 ವರ್ಷಗಳನ್ನು ಪೊರೈಸಿ 75ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂದರ್ಭದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನದಂದು ಹಲವು ಘೋಷಣೆಗಳನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ.
2100 ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಿಗೆ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳುವುದು. ಕಲ್ಯಾಣ ಕರ್ನಾಟಕ ಭಾಗಕ್ಕೆ 68 ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ. 14 ಪ್ರಾಥಮಿಕ ಆರೋಗ್ಯ ಕೇದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವುದು. ಕಲ್ಯಾಣ ಕರ್ನಾಟಕದ ಭಾಗದ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗಾಗಿ 150 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗುವುದು. ಮುಂದಿನ ವರ್ಷದಿಂದ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5000 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವ ಕುರಿತು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಅತಿ ಹೆಚ್ಚು ಕಾಳಜಿ ಹಾಗೂ ಮುತುವರ್ಜಿ ವಹಿಸಿದ ಬಿಜೆಪಿ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮತ್ತು ಎಲ್ಲ ಸಚಿವರುಗಳಿಗೆ ಕಲ್ಯಾಣ ಕರ್ನಾಟಕ ಭಾಗದ ಜನರ ಪರವಾಗಿ ಅಭಿನಂದನೆಯನ್ನು ಸಲ್ಲಿಸುವುದಾಗಿ ನಮೋಶಿ ಅವರು ತಿಳಿಸಿದ್ದಾರೆ.