ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆಗೆ ಆಗ್ರಹ

ಕಲಬುರಗಿ,ಜು.19: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ವೇತನವನ್ನು ಪರಿಷ್ಕರಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ ಕಲ್ಯಾಣ ಕರ್ನಾಟಕ ನಿಗಮದ ಅಧ್ಯಕ್ಷ ಚಂದ್ರಕಾಂತ್ ಗದ್ದಗೆ ಅವರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಈಗಾಗಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದರು.
ಸಾರಿಗೆ ಸಂಸ್ಥೆಯ ನೌಕರರಿಗೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡುವುದು ಕಡ್ಡಾಯವಾಗಿದೆ. ಆದಾಗ್ಯೂ, 2019-2020ರಿಂದ ವೇತನ ಪರಿಷ್ಕರಣೆ ಆಗಿಲ್ಲ. ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕೂಡಲೇ 3000 ಹುದ್ದೆಗಳಿಗೆ ನೇಮಕಾತಿ ಆಗಬೇಕು ಎಂದು ಆಗ್ರಹಿಸಿದ ಅವರು, ಸಾರಿಗೆ ನಿಗಮದಲ್ಲಿ ಕಳೆದ 2020ರಲ್ಲಿ ಚಾಲಕರ ನೇಮಕಾತಿಗೆ ಆದೇಶ ಹೊರಡಿಸಲಾಗಿತ್ತು. ಅಲ್ಲದೇ ನಿಗಮದಲ್ಲಿ ಅನೇಕರು ನಿವೃತ್ತಿ ಹೊಂದಿದ್ದಾರೆ. ಆದಾಗ್ಯೂ, ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಈಗಿರುವ ನೌಕರರ ಮೇಲೆ ಕೆಲಸದ ಒತ್ತಡ ಬೀಳುತ್ತಿದೆ. ಆದ್ದರಿಂದ ಕೂಡಲೇ ಎಲ್ಲ ಖಾಲಿ ಹುದ್ದೆಗಳಿಗೆ ತ್ವರಿತವಾಗಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುಮಾರು 22000 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ದರಿಂದ ಸಾರಿಗೆ ಸಂಸ್ಥೆಯಿಂದ ತೆರಿಗೆ ವಿನಾಯಿತಿ ಕೊಡುವಂತೆ ಹಾಗೂ ಸರ್ಕಾರ ಉಚಿತ ಬಸ್ ಪಾಸ್‍ಗಳನ್ನು ಸಂಪೂರ್ಣ ಪ್ರಮಾಣದಲ್ಲಿ ಭರಿಸುವ ಮೂಲಕ ಸಂಸ್ಥೆಯು ನಷ್ಟದಿಂದ ಹೊರಬರುವಂತೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹಳೆಯ ಬಸ್‍ಗಳು ಇದ್ದು, ಸಮರ್ಪಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು 350 ಬಸ್‍ಗಳ ಖರೀದಿಗ ಅನುದಾನ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕಣ್ಣಿ, ಭೀಮರಾವ್ ಯರಗೋಳ್, ಸೈಯದ್ ಇಸ್ಮಾಯಿಲ್ ಪಟೇಲ್ ಮುಂತಾದವರು ಉಪಸ್ಥಿತರಿದ್ದರು.