ಕಳಪೆ ಗುಣಮಟ್ಟದ ರಸಗೊಬ್ಬರ ವಿತರಣಾ ಘಟಕಗಳ ವಿರುದ್ದ ಕ್ರಮ: ಜಿ.ಪಂ. ಅಧ್ಯಕ್ಷೆ ಸುಜಾತಾ ಕಳ್ಳಿಮನಿ

ವಿಜಯಪುರ, ಏ.9-ಕಳಪೆ ಗುಣಮಟ್ಟದ ರಸಗೊಬ್ಬರ ತಯಾರಿಕಾ ಘಟಕಗಳ ವಿರುದ್ದ ಕ್ರಮ ಕೈಗೊಳ್ಳುವ ಜೊತೆಗೆ ಅವರ ಲೈಸನ್ಸ್ ರದ್ದತಿಗೂ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ 19 ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ರೈತರಿಗೆ ತೊಂದರೆ ಆಗದಂತೆ ಹಾಗೂ ಅವರಿಗೆ ಯಾವುದೇ ರೀತಿಯ ಮೋಸವಾಗದಂತೆ ನೋಡಿಕೊಳ್ಳಲು ಅವರಿಗೆ ಉತ್ತಮ ರಸಗೊಬ್ಬರ, ಬೀಜ ಪೂರೈಕೆ ಆಗುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಕನ್ನಾಳ ಕ್ರಾಸ್ ಹತ್ತಿರ ಒಂದು ಗೊಬ್ಬರ ತಯಾರಿಸುವ ಕಾರ್ಖಾನೆ ಇದ್ದು ಅಲ್ಲಿ ಮಣ್ಣಿನಿಂದ ಮಾಡಿದ ಕಳಪೆಮಟ್ಟದ ಗೊಬ್ಬರವನ್ನು ತಯಾರಿಸಿ ಗೊಬ್ಬರವನ್ನು ಬೇರೆ ತಾಲೂಕಿನಲ್ಲಿರುವ ರೈತರಿಗೆ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಮಾತನಾಡಿ ಕಳಪೆಮಟ್ಟದ ಗೊಬ್ಬರವನ್ನು ಬಳಸುವುದರಿಂದ ರೈತರ ಬೆಳೆಗಳು ಗುಣಮಟ್ಟ ಕಡಿಮೆಯಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕಾರ್ಖಾನೆಗೆ ಆಕಸ್ಮಿಕವಾಗಿ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ತಿಳಿಸಿ, ಕಳಪೆ ಮಟ್ಟದ ಬೀಜಗಳನ್ನು ರೈತರಿಗೆ ಪೂರೈಕಯಿಂದ ರೈತರು ನಿಗದಿತ ಪ್ರಮಾಣದ ಬೆಳೆಯನ್ನು ಪಡೆಯಲಾಗುತ್ತಿಲ್ಲ. ಆದ್ದರಿಂದ ಕಳಪೆ ಮಟ್ಟದ ಗೊಬ್ಬರ ಮತ್ತು ಬೀಜಗಳ ಗೋದಾಮುಗಳಿಗೆ ಭೇಟಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಹಲವು ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವ ಹಿನ್ನೆಲೆಯಲ್ಲಿ ಅಂತಹ ಘಟಕಗಳನ್ನು ಕೂಡಲೇ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು, ಚಾಲ್ತಿಯಲ್ಲಿರದ ಘಟಕಗಳು ಆದಷ್ಟುಬೇಗ ಚಾಲ್ತಿ ಮಾಡಬೇಕು ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಕ್ಷರ ದಾಸೋಹ ಯೋಜನೆಯಡಿ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳುವುದರ ಜೊತೆಗೆ ಮಕ್ಕಳಿಗೆ ಬಿಸಿ ಊಟ ಹಾಗೂ ಪೌಷ್ಠಿಕ ಆಹಾರ ಸಮರ್ಪಕವಾಗಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ 40 ರಷ್ಟು ಪಲಿತಾಂಶ ದಾಖಲಿಸಿದ ಶಾಲೆಗಳನ್ನು ಗುರುತಿಸಿ ಅಂತಹ ಶಾಲೆಗಳು ಮುಂಬರುವ ಪರೀಕ್ಷೇಗಳಲ್ಲಿ ಉತ್ತಮ ಪ್ರಗತಿ ಸಾಧಿಸುವಂತೆ ನೊಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಜಲ ಶಕ್ತಿ ಅಭಿಯಾನ ದುಡಿಯೋಣ ಬಾ ಅಭಿಯಾನದೊಂದಿಗೆ ಕ್ಯಾಚ್ ದ ರೇನ್ ಕಂಪ್ಯೇನ್ -ಮಳೆ ನೀರು ಸಂರಕ್ಷಣೆ ,ಏಪ್ರೀಲ್ 1 ರಿಂದ ಸತತ ನೂರು ದಿನಗಳ ಕಾಲ ನಡೆಯಲಿದ್ದು ಈ ಯೋಜನೆಯಡಿ ಕೆರೆಹೂಳೆತ್ತುವುದು, ಬಚ್ಚಲು ಗುಂಡಿ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ, ಕೃಷಿ ಹೊಂಡ, ಕಂದಕ ಬದು ನಿರ್ಮಾಣ, ಸರ್ಕಾರಿ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಘಟಕ ನಿರ್ಮಾಣ , ಕೆರೆಗಳನ್ನು ಸಮಗ್ರ ಅಭಿವೃದ್ದಿ ಪಡಿಸಬೇಕೆಂದು ಅವರು ಸೂಚಿಸಿದರು.
ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ ಅವರ 15 ದಿನಗಳ ಸಂಬಳವನ್ನು ಕಡಿತ ಗೊಳಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ನಡಾವಳಿಗಳಿಗೆ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.