
ಗುಬ್ಬಿ, ಏ. ೩- ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ರವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಿಂದ ಗತಕಾಲದ ಇತಿಹಾಸ ತಾಲ್ಲೂಕಿನಲ್ಲಿ ಮರುಕಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ವರ್ಷಗಳ ಕಾಲದಿಂದಲೂ ತಾಲ್ಲೂಕಿನ ಜನತೆಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೆಂಬುದು ಕನಸಾಗಿತ್ತು ಅದಕ್ಕೆ ಪೂರಕವಾಗಿ ಎಸ್.ಆರ್. ಶ್ರೀನಿವಾಸ್ ರವರು ಕಾಂಗ್ರೆಸ್ ಸೇರ್ಪಡೆಗೊಂಡು ಗತಕಾಲದ ಇತಿಹಾಸವನ್ನು ಮರುಗಳಿಸಲಿದೆ. ಅನೇಕ ಕಾರ್ಯಕರ್ತರು ಪ್ರಾಮಾಣಿಕವಾಗಿ ಪಕ್ಷವನ್ನು ಕಟ್ಟುವ ಮೂಲಕ ಶ್ರಮಿಸಿದ್ದಾರೆ. ಯಾವುದೇ ಗೊಂದಲವಿಲ್ಲದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡಲಾಗುವುದು ಎಂದರು.
ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸಲು ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಜವಾಬ್ದಾರಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ರಾಜ್ಯ ಕಾಂಗ್ರೆಸ್ ಮುಖಂಡರುಗಳಿಗೆ ಧನ್ಯವಾದಗಳು ತಿಳಿಸುತ್ತೇನೆ ಎಂದರು.
ನಾನು ಯಾವುದೇ ಪಕ್ಷದಲ್ಲಿ ಇದ್ದರೂ ಪಕ್ಷ ಸಿದ್ದಾಂತ ಮತ್ತು ನಿಷ್ಠೆಯಿಂದ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಆ ಒಂದು ನಂಬಿಕೆ ಹಿನ್ನೆಲೆಯಿಂದ ನನಗೆ ಕಾಂಗ್ರೆಸ್‌ನಲ್ಲಿ ಅವಕಾಶ ಲಭಿಸಿದೆ. ಇಷ್ಟು ವರ್ಷಗಳ ಪ್ರಾಮಾಣಿಕವಾಗಿ ದುಡಿದಂತ ಯಾವೊಬ್ಬ ಕಾರ್ಯಕರ್ತರನ್ನು ಸಹ ಕಡೆಗಣಿಸದೆ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಹ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ, ಶಶಿ ಹುಲಿಕುಂಟೆ, ತಾಲ್ಲೂಕು ಅಧ್ಯಕ್ಷ ನರಸಿಂಹಯ್ಯ, ಶಂಕರಾನಂದ್, ನಿಂಬೆಕಟ್ಟೆ ಜಯಣ್ಣ, ಮಹಮ್ಮದ್ ಸಾಧಿಕ್, ಸೌಭಾಗ್ಯಮ್ಮ, ಮಂಜುನಾಥ್ ಸೇರಿದಂತೆ ತಾಲ್ಲೂಕಿನ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.