ಕಾಂಗ್ರೆಸ್ ಅಭ್ಯರ್ಥಿಯ ಗೆಲ್ಲಿಸಿ;ಶಿವಶಂಕರ ರೆಡ್ಡಿ

ಗೌರಿಬಿದನೂರು : ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಒಮ್ಮತದಿಂದ ಶ್ರಮಿಸೋಣ ಎಂದು ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದ ನದಿದಡ ಶ್ರೀಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅನುಷ್ಟಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೆ ಆಸರೆಯಾಗಿದೆ. ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗುವ ಮೂಲಕ ಬಡವರ ಪಾಲಿಗೆ ವರದಾನವಾಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದ ವೇಳೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಜತೆಗೆ ವಿಶೇಷ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳ ಜತೆಗೆ ರಾಷ್ಟ್ರ ಮಟ್ಟದಲ್ಲಿ ಮುಂದಿನ ದಿನಗಳಲ್ಲಿ ನೀಡುವ ಯೋಜನೆಗಳನ್ನು ಜನತೆಗೆ ತಿಳಿಸುವ ಮೂಲಕ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯ ರವರಿಗೆ ಮತಯಾಚನೆ ಮಾಡಿ ಪ್ರತೀ ಬೂತ್ ನಲ್ಲಿ ಗರಿಷ್ಟ ಮತಗಳನ್ನು ಪಡೆಯಲು ಮುಖಂಡರು ಮುಂದಾಗಬೇಕಾಗಿದೆ.
ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಹಾಲಿ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ರ ಬೆಂಬಲಿಗರು ಸಮನ್ವಯದಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತಯಾಚನೆ ಮಾಡಲಾಗುವುದು. ಶೀಘ್ರದಲ್ಲೇ ಒಂದೇ ವೇದಿಕೆಯಲ್ಲಿ ಇಬ್ಬರೂ ಸೇರಿ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ. ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಭಾಗದಲ್ಲಿ ಅಭ್ಯರ್ಥಿಗೆ ದಾಖಲೆಯ ಮತಗಳನ್ನು ಪಡೆಯಬೇಕಾಗಿದೆ ಎಂದು ಹೇಳಿದರು.
ವಿಧಾನಪರಿಚತ್ ಸದಸ್ಯರಾದ ಎಂ.ಆರ್.ಸೀತಾರಂ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅಭ್ಯರ್ಥಿಯಾಗಿದ್ದು, ೮ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಉತ್ಸಾಹದಿಂದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತಿದ್ದಾರೆ. ನಾವೆಲ್ಲರೂ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಪ್ರತಿ ಕಾರ್ಯಕರ್ತರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ತಿಳಿಸಬೇಕಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಕೆ.ಎನ್.ಕೇಶವರೆಡ್ಡಿ ಮಾತನಾಡಿ, ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಕ್ಷೇತ್ರದಲ್ಲಿ ದಶಕಗಳಿಂದಲೂ ಪಕ್ಷದ ಗೆಲುವಿಗೆ ಇತಿಹಾಸವಿದೆ. ಎನ್.ಎಚ್.ಶಿವಶಂಕರರೆಡ್ಡಿ ಯವರು ಎರಡೂವರೆ ದಶಕಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆಯಾಗಿವೆ. ಬಿಜೆಪಿ ಯವರ ದುರಾಡಳಿತವನ್ನು ಜನತೆಗೆ ತಿಳಿಸಿ ಕ್ಷೇತ್ರದಲ್ಲಿನ ಹಣವಂತರಿಗೆ ಶಿವಶಂಕರರೆಡ್ಡಿ ಯವರ ತಾಕತ್ತು ಏನು ಎಂಬುದನ್ನು ತೀರಿಸುವ ಸದಾವಕಾಶ ಲೋಕಸಭೆ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಸಿಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೇದಲವೇಣಿ ಎನ್.ವೇಣು, ಬಿ.ಪಿ.ಅಶ್ವತ್ಥನಾರಾಯಣಗೌಡ, ಮುಖಂಡರಾದ ಎನ್.ಎಚ್.ಪ್ರಕಾಶರೆಡ್ಡಿ, ಹನುಮಂತರೆಡ್ಡಿ, ಗಂಗಾಧರಪ್ಪ, ಭಾರ್ಗವರೆಡ್ಡಿ, ಖಲೀಂ ಉಲ್ಲಾ, ಎ.ಅರುಂಧತಿ, ರೇಣುಕಮ್ಮ, ನಗರಸಭೆ ಸದಸ್ಯರು, ಗ್ರಾ.ಪಂ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.