ಕಾಂಗ್ರೆಸ್ ಗೆ ಐತಿಹಾಸಿಕ ಜಯ

ಬೆಂಗಳೂರು,ಮೇ.13- ದೇಶವನ್ನು ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ರಾಜ್ಯದ ಜನ ದಕ್ಷಿಣ ಭಾರತದ ಬಾಗಿಲು ಬಂದ್ ಮಾಡಲು ಕಾಂಗ್ರೆಸ್ ಗೆ ಸಹಕಾರ ನೀಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅಭೂತಪೂರ್ವ ಬಹುಮತ ನೀಡಿದ ಪ್ರತಿಯೊಬ್ಬ ಮತದಾರರಿಗೂ ಮುಕ್ತ ಕಂಠದಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಜಯಭೇರಿ ಹಿನ್ನೆಲೆಯಲ್ಲಿ ಪಕ್ಷದ ನಾಯಕರೊಂದಿಗೆ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿರುವವರು ಸೇರಿದಂತೆ ಮತ ಹಾಕದವರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಅವರು ತಿಳಿಸಿದ್ದಾರೆ.

ಭರವಸೆ ಈಡೇರಿಸಲು ಬದ್ಧ:

ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಪಕ್ಷ ಅಧಿಕಾರವಹಿಸಿಕೊಂಡ ಮೊದಲ ಸಂಪುಟ ಸಭೆಯಲ್ಲಿ ಈಡೇರಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿ ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಇದೇ ವೇಳೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ತಯಾರಾಗಿ:

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಮೈ ಮರೆಯದಿರಿ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರು ಮಾಡಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಕಾಂಗ್ರೆಸ್ ಪಾಲಿಗೆ ಮಹತ್ವವಾಗಿದೆ ಈ ನೆಲೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿ ಮುಂದಿನ ಸವಾಲನ್ನು ಎದುರಿಸಲು ಸಿದ್ಧರಾಗಿ ಎಂದು ಅವರು ತಿಳಿಸಿದರು.

ನಾನು ಕರ್ನಾಟಕದ ಭೂಮಿಪುತ್ರ:

ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಾವು ಗುಜರಾತಿನ ಭೂಮಿಪುತ್ರ ಹೀಗಾಗಿ ತಮಗೆ ಮತ ನೀಡಬೇಕು ಎಂದು ಅವರು ಗುಜರಾತ್ ಜನತೆಗೆ ಮನವಿ ಮಾಡಿದ್ದರು ಎಂದು ಇದೇ ಸಂದರ್ಭದಲ್ಲಿ ನೆನಪು ಮಾಡಿಕೊಂಡರು.

ಕರ್ನಾಟಕ ನನ್ನ ಜನ್ಮ ಭೂಮಿ ಇದು ನನ್ನ ಭೂಮಿ ಹೀಗಾಗಿ ನಾನು ಈ ಭೂಮಿಯ ಪುತ್ರ ರಾಜ್ಯದ ಜನ ತಮಗೆ ಮತ ಚಲಾಯಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಿದ್ದರು