
ಧಾರವಾಡ : ಶೈಕ್ಷಣಿಕ ನಗರಿ ಧಾರವಾಡದ ಜ್ವಲಂತ ಸಮಸ್ಯೆಗಳ ನಿವಾರಣೆ ಮಾಡಲು ಶಾಸಕ ಅರವಿಂದ ಬೆಲ್ಲದ ವಿಫಲರಾಗಿದ್ದಾರೆ. ಬಿಜೆಪಿ ಶಾಸಕರ ವಿಫಲತೆ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣವಾಗಲಿದೆ ಎಂದು ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್ ಕೆ ಪಾಟೀಲ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ವಿದ್ಯಾಕಾಶಿ, ಸಾಂಸ್ಕೃತಿಕ ನಗರಿ ಇಲ್ಲಿ ವೈಜ್ಞಾನಿಕ ಬಸ್ ಸಂಚಾರ ಇಲ್ಲ, ಸರಿಯಾಗಿ ಪ್ರಾಥಮಿಕ ಶಾಲೆಗಳು ಇಲ್ಲ, ಮೂಲಭೂತವಾಗಿ ಜನರ ಸಮಸ್ಯೆಗಳಿಗೆ ಸರಿಯಾಗಿ ಶಾಸಕರು ಸ್ಪಂದನೆ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮೂರು ತಲೆಮಾರಿನಿಂದ ನಮ್ಮ ಮನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು, ಮೊದಲ ಬಾರಿ ಟಿಕೇಟ್ ಕೇಳಿದ್ದೇನೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಗೆಲ್ಲುವ ವಿಶ್ವಾಸವಿದೆ ಎಂದರು.
ಜನರಿಗೆ ಶಾಸಕ ಅರವಿಂದ ಬೆಲ್ಲದ ಅವರ ಅಭಿವೃದ್ಧಿ ಇಲ್ಲದ ಆಡಳಿತವನ್ನು ಮನವರಿಕೆ ಮಾಡಿಕೊಡಲು ನಿರ್ಧರಿಸಿದ್ದೇನೆ. ಕ್ಷೇತ್ರದಲ್ಲಿ 11 ಜನ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳಾಗಿದ್ದಾರೆ. ಆದರೆ ಯಾರಿಗೆ ಟಿಕೇಟ್ ನೀಡಿದರೂ ಅವರ ಪರವಾಗಿ ಪ್ರಚಾರ ಮಾಡುತ್ತೇನೆ. ಬಂಡಾಯದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು. ಪಕ್ಷದಲ್ಲಿ ಸಕ್ರಿಯವಾಗಿದ್ದೇನೆ. ಪಕ್ಷ ಹಮ್ಮಿಕೊಂಡ ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿಕೊಂಡಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ನಾವೆಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರ ಹುಮ್ಮಸ್ಸು ಪೆÇ್ರೀತ್ಸಾಹ ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇರುವುದು ಪಕ್ಕಾ ಆಗಿದೆ. ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ರವಿ ಕಪಲಿ, ಹರೀಶ ಬಾಳಂಬಿಡ್, ಬಾಲಕೃಷ್ಣ ಕೆಡಿಯೂರ, ಸಂಜು ಹಿರೇಮಠ ಸೇರಿದಂತೆ ಹಲವರು ಇದ್ದರು.