ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ ಕಪಿಲ್ ಹೇಳಿಕೆಗೆ ಗೆಹ್ಲೋಟ್ ತಿರುಗೇಟು

ನವದೆಹಲಿ,ನ.16- ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕರ ಆಂತರಿಕ ಕಚ್ಚಾಟ ಬೀದಿಗೆ ಬಂದಿದ್ದು ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ ಆಗಿದೆ.

ದೇಶದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ ಎನ್ನುವುದನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎನ್ನುವ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಹೇಳಿಕೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿರುಗೇಟು ನೀಡಿದ್ದಾರೆ.

ಕಪಿಲ್ ಸಿಬಲ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪಕ್ಷದ ಆಂತರಿಕ ವಿಷಯವನ್ನು ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಸರಿಯಲ್ಲ.ಈ ರೀತಿಯ ಹೇಳಿಕೆ ದೇಶದ ವಿವಿಧ ಭಾಗಗಳಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಭಾವನೆಗಳಿಗೆ ಧಕ್ಕೆ ಬರಲಿದೆ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಸಂಕಷ್ಟದ ಸಮಯದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಎಲ್ಲರೂ ಮಾಡಬೇಕಾಗಿದೆ ಹೊರತು ಹಾದಿಬೀದಿಯಲ್ಲಿ ಹೇಳಿಕೆ ನೀಡಿ ಪಕ್ಷದ ಘನತೆ-ಗೌರವಕ್ಕೆ ಒಂದು ತರಬಾರದು ಎಂದು ಅವರು ಹೇಳಿದ್ದಾರೆ.

2004 ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಎರಡು ಬಾರಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಯಾರು ಮರೆಯಬಾರದು ಎಂದು ಅವರು ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತೀರಾ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ವಿರುದ್ಧ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಮತ್ತೊಮ್ಮೆ ಹರಿಹಾಯ್ದಿದ್ದಾರೆ ಹಿನ್ನೆಲೆಯಲ್ಲಿ ಅವರಿಗೆ ತಿರುಗೇಟು ನೀಡಿದ್ದಾರೆ