ಕಲಬುರಗಿ.ಮೇ,30: ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೋಲಿ, ಕಬ್ಬಲಿಗ ಎಸ್‍ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಎಸ್. ಜಮಾದಾರ್ ಅವರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಒಂದು ಉನ್ನತ ಹುದ್ದೆಯನ್ನು ಕೊಡಬೇಕು ಎಂದು ಸಮಿತಿಯ ಜಿಲ್ಲಾಧ್ಯಕ್ಷ ಶಿವು ಧಣಿ ಅವರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಮತ್ತು ವಿಧಾನಸಭೆ ಉಪ ಚುನಾವಣೆಗಳಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕೋಲಿ ಸಮಾಜಕ್ಕೆ ಪರಿಶಿಷ್ಟ ಪಂಗಡಕ್ಕೆ ಸೇರಿಸಲಿಕ್ಕೆ ಆಗಲಿಲ್ಲ. ಅದಕ್ಕಾಗಿ ಕೋಲಿ ಕಬ್ಬಲಿಗ ಎಸ್‍ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಎಸ್. ಜಮಾದಾರ್ ಅವರ ನೇತೃತ್ವದಲ್ಲಿ ಅನೇಕ ಹೋರಾಟಗಳನ್ನು ಮಾಡಿದರೂ ಸಹ ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಲು ಬಿಜೆಪಿ ಸರ್ಕಾರಕ್ಕೆ ಆಗಲಿಲ್ಲ. ಅದಕ್ಕಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಿ ಸಮಾಜಕ್ಕೆ ಮೋಸ ಮಾಡಿದ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸಲು ರಾಜ್ಯಾದ್ಯಂತ ಕರೆ ಕೊಟ್ಟರು. ಕರೆಗೆ ಕೋಲಿ ಸಮಾಜದ ಜನರು ಸ್ಪಂದಿಸಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಸ್ಪಷ್ಟ ಬಹುಮತವನ್ನು ಹೊಂದಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿನ ಎಲ್ಲ ತಾಲ್ಲೂಕುಗಳಲ್ಲಿ ಪ್ರತಿ ಗ್ರಾಮಗಳಲ್ಲಿಯೂ ಸಹ ಲಚ್ಚಪ್ಪ ಎಸ್. ಜಮಾದಾರ್ ಅವರ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ವ್ಯಾಪಕ ಪ್ರಚಾರ ಮಾಡಿದರು. ಪರಿಣಾಮವಾಗಿ ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ, ಸೇಡಂದಲ್ಲಿ ಡಾ. ಶರಣಪ್ರಕಾಶ್ ಪಾಟೀಲ್, ಉತ್ತರ ಕ್ಷೇತ್ರದಲ್ಲಿ ಶ್ರೀಮತಿ ಕನೀಜ್ ಫಾತಿಮಾ, ಅಫಜಲಪುರದಲ್ಲಿ ಎಂ.ವೈ. ಪಾಟೀಲ್, ದಕ್ಷಿಣ ಕ್ಷೇತ್ರದಲ್ಲಿ ಅಲ್ಲಮಪ್ರಭು ಪಾಟೀಲ್, ಆಳಂದ್‍ದಲ್ಲಿ ಬಿ.ಆರ್. ಪಾಟೀಲ್, ಜೇವರ್ಗಿಯಲ್ಲಿ ಡಾ. ಅಜಯಸಿಂಗ್ ಅವರೂ ಸೇರಿದಂತೆ ಏಳು ಜನ ಶಾಸಕರಾಗಿ ಆಯ್ಕೆಯಾಗುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಅವರು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಕೋಲಿ ಸಮಾಜದವರು ಸಂಪೂರ್ಣ ಭರವಸೆಯನ್ನು ಹೊಂದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ಶಕ್ತಿ ಮೀರಿ ಪ್ರಯತ್ನಿಸಿದ ಸಮಾಜದ ಪರಮೋಚ್ಛ ನಾಯಕ ಲಚ್ಚಪ್ಪ ಎಸ್. ಜಮಾದಾರ್ ಅವರಿಗೆ ಒಂದು ಉನ್ನತ ಹುದ್ದೆಯನ್ನು ಸರ್ಕಾರದಲ್ಲಿ ಒದಗಿಸಬೇಕು ಎಂದು ಒತ್ತಾಯಿಸಿದ ಅವರು, ಅಲ್ಲದೇ ನಿಜಶರಣ ಅಂಬಿಗರ ಚೌಡಯ್ಯನವರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಕೊಡಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಫಿರೋಜಾಬಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ್ ಮರತೂರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್ ಸಣ್ಣೂರ್, ಜಿಲ್ಲಾ ಸಹ ಕಾರ್ಯದರ್ಶಿ ಆನಂದ್ ಸಂತಾಳ್, ಗುರುನಾಥ್ ಹಾವನೂರ್ ಮುಂತಾದವರು ಉಪಸ್ಥಿತರಿದ್ದರು.