ಕಾಂಗ್ರೆಸ್ ಸಾರಥ್ಯ ರಾಹುಲ್‌ಗೆ ಒಲವು

ನವದೆಹಲಿ, ಡಿ. ೧೯- ಕಾಂಗ್ರೆಸ್ ನ ಯುವರಾಜ ರಾಹುಲ್ ಗಾಂಧಿ ಮತ್ತೆ ಪಕ್ಷದ ಸಾರಥ್ಯ ವಹಿಸಿಕೊಳ್ಳುವುದು ಬಹುತೇಕ ನಿಶ್ಚಿತವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಕಾಂಗ್ರೆಸ್ ಹೇಳಿದೆ.
ಕಾಂಗ್ರೆಸ್ ನ ನೂತನ ಅಧ್ಯಕ್ಷರ ಆಯ್ಕೆ ಸಂಬಂಧದ ಪ್ರಕ್ರಿಯೆಗಳು ಸದ್ಯದಲ್ಲೇ ಆರಂಭವಾಗಲಿದ್ದು, ಕಾಂಗ್ರೆಸ್ ನ ಶೇ. ೯೯.೦೯ ಮುಖಂಡರು ಹಾಗೂ ಕಾರ್ಯಕರ್ತರು, ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬ ಬಯಕೆ ಹೊಂದಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರೇ ಸೂಕ್ತ ಎಂಬುದು ಎಲ್ಲರ ಒಕ್ಕೊರಲ ಅಭಿಪ್ರಾಯ ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಇಂದಿನಿಂದ ಮುಂದಿನ ೧೦ ದಿನಗಳ ಕಾಲ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಪಕ್ಷದ ಹಿರಿಯ ನಾಯಕರ ಜೊತೆ ಸಮಾಲೋಚನಾ ಸಭೆಗಳನ್ನು ನಡೆಸಲಿದ್ದು, ಜನವರಿಯಲ್ಲಿ ನಡೆಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಯಾರನ್ನು ಪಕ್ಷದ ಅಧ್ಯಕ್ಷರನ್ನಾಗಿ ನಿಯುಕ್ತಿ ಮಾಡಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಒಂದು ಕುಟುಂಬವಾಗಿ ಒಗ್ಗಟ್ಟಿನಿಂದ ಇದ್ದು, ಪಕ್ಷದ ಅಧ್ಯಕ್ಷರ ಚುನಾವಣೆಯ ಘೋಷಣೆ ನಂತರ, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿರುವ ಸುರ್ಜೆವಾಲಾ, ಪಕ್ಷದಲ್ಲಿ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಆಂತರಿಕ ಕಲಹಗಳಿವೆ ಎಂಬ ವರದಿಗಳನ್ನು ತಳ್ಳಿಹಾಕಿದ್ದಾರೆ.
ಜನವರಿಯಲ್ಲಿ ನಡೆಯಲಿರುವ ಎಐಸಿಸಿ ಮಹಾಅಧಿವೇಶನದಲ್ಲಿ ನೂತನ ಅಧ್ಯಕ್ಷರ ಆಯ್ಕೆಯ ಭಾಗವಾಗಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇಂದಿನಿಂದ ಪಕ್ಷದ ಹಿರಿಯ ನಾಯಕರ ಜೊತೆ ೧೦ ದಿನಗಳ ಕಾಲ ಸರಣಿ ಸಭೆಗಳನ್ನು ನಡೆಸಲಿದ್ದು, ಈ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಪಕ್ಷವನ್ನು ಪುನಶ್ಚೇತನಗೊಳಿಸುವ ಬಗ್ಗೆ ಸಮಾಲೋಚನೆಗಳು ನಡೆಯಲಿವೆ.
ಕಳೆದ ಆಗಸ್ಟ್ ನಲ್ಲಿ ಕಾಂಗ್ರೆಸ್‌ನ ೨೩ ಹಿರಿಯ ನಾಯಕರು ಪಕ್ಷ ಪುವರ್ ರಚನೆಯಾಗಬೇಕು. ಗಾಂಧಿ ಕುಟುಂಬದವರನ್ನು ಬಿಟ್ಟು ಬೇರೆ ನಾಯಕರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು. ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು ಎಂದು ಕೋರಿ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರ ಬಹಿರಂಗವಾಗಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಈ ಬೆಳವಣಿಗೆ ಪಕ್ಷದ ಹೈಕಮಾಂಡ್ ಗೆ ಸಿಟ್ಟುತರಿಸಿತ್ತು. ಇತ್ತೀಚೆಗೆ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಪಕ್ಷದಲ್ಲಿ ಫೈವ್ ಸ್ಟಾರ್ ಸಂಸ್ಕೃತಿ ಇದ್ದು, ಬ್ಲಾಕ್ ಮಟ್ಟದಿಂದ ಹಿಡಿದು ಎಲ್ಲಾ ಸಂಘಟನಾತ್ಮಕ ಮಟ್ಟದವರೆಗೂ ಚುನಾವಣೆ ನಡೆಸಬೇಕು ಎಂದು ಹೇಳಿದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ನಾಯಕತ್ವ ಬದಲಾವಣೆ ಸಂಬಂಧ ಪತ್ರ ಬರೆದಿದ್ದ ೨೩ ಹಿರಿಯ ನಾಯಕರು ಸೇರಿದಂತೆ, ಪಕ್ಷದ ಎಲ್ಲಾ ಹಿರಿಯ ನಾಯಕರ ಜೊತೆ ಸಭೆ ನಡೆಸುವರು. ಈ ಸಭೆ ವಿಶೇಷ ಗುಂಪಿನ ನಾಯಕರ ಸಭೆ ಅಲ್ಲ, ಇದು ಯಾವುದೇ ಭಿನ್ನಮತೀಯರ ಅಥವಾ ಬಂಡಾಯಗಾರರ ಭೇಟಿಯ ಸಭೆ ಅಲ್ಲ ಎಂದು ಸುರ್ಜೆವಾಲಾ ಸ್ಪಷ್ಟಪಡಿಸಿದ್ದಾರೆ.
ಇಂದಿನ ಈ ಸಭೆಯಲ್ಲಿ ರಾಹುಲ್ ಗಾಂಧಿ ಸಹ ಪಾಲ್ಗೊಳ್ಳುವರು ಎಂದು ಹೇಳಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಎಐಸಿಸಿ ಸದಸ್ಯರು ಸೇರಿದಂತೆ, ಅಧ್ಯಕ್ಷರ ಆಯ್ಕೆಗೆ ಮತ ಚಲಾಯಿಸುವ ಪ್ರತಿಯೊಬ್ಬರೂ ಪಕ್ಷದ ಅಧ್ಯಕ್ಷ ಹುದ್ದೆಯನ್ನು ರಾಹುಲ್ ಗಾಂಧಿ ಅವರೇ ವಹಿಸಿಕೊಳ್ಳಬೇಕು. ಅವರೇ ಪಕ್ಷವನ್ನು ಮುನ್ನಡೆಸಲು ಸಮರ್ಥರು ಎಂಬ ಅಭಿಪ್ರಾಯ ಹೊಂದಿದ್ದರು ಎಂಬುದು ನನ್ನ ನಂಬಿಕೆ. ಹಾಗೆಯೇ ಸಾಮಾನ್ಯ ಭಾರತೀಯರಿಗೂ ತಮ್ಮನ್ನು ಪ್ರೀತಿಸುವ ಅಪರೂಪದ ವ್ಯಕ್ತಿತ್ವ ಹೊಂದಿರುವ ರಾಹುಲ್ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂ ಆಶಯ ಹೊಂದಿದ್ದಾರೆ ಎಂದು ಸುರ್ಜೆವಾಲಾ ಹೇಳಿದ್ದಾರೆ.
೨೦೧೯ ರಲ್ಲಿ ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆಹೊತ್ತು ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರು ಕಾರ್ಯನಿರ್ವಹಿಸುತ್ತಿದ್ದು, ಬರುವ ಜನವರಿಯಲ್ಲಿ ನೂತನ ಪೂರ್ಣಾವಧಿ ಅಧ್ಯಕ್ಷರ ಆಯ್ಕೆ ನಡೆಯಲಿದೆ.