ಕಾನೂನು ಅರಿವು ನೆರವು ಕಾರ್ಯಕ್ರಮದ ಸಮಾರೋಪ ನಾಳೆ

ಬೀದರ, ನ.13: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 25ನೇ ವರ್ಷಾಚರಣೆ ಮತ್ತು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಿಂದ ಆರಂಭಗೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದ ಸಮಾರೋಪ ಸಮಾರಂಭವು ನವೆಂಬರ್ 14ರಂದು ಬೆಳಗ್ಗೆ 10.30ಕ್ಕೆ ಪೂಜ್ಯ ಶ್ರೀ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಾಡಲೂರ ಸತ್ಯನಾರಾಯಣಾಚಾರ್ಯ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನವೆಂಬರ್ 12ರಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ಬೀದರ ಜಿಲ್ಲೆಯಾದ್ಯಂತ 395 ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 295 ಗ್ರಾಮಗಳಲ್ಲಿ ಮನೆಮನೆಗೆ ಹೋಗಿ ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೆಯೋದ್ದೇಶಗಳನ್ನೊಳಗೊಂಡ ಕರಪತ್ರಗಳನ್ನು ಹಂಚಲಾಗಿದೆ. ಈ ವೇಳೆ ಗ್ರಾಮೀಣ ಜನರಿಗೆ ಬೇರೆ ಬೇರೆ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.

ನಗರ ಪ್ರದೇಶದಲ್ಲಿ 26 ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು, 15 ಶಾಲಾ ಕಾಲೇಜುಗಳಲ್ಲಿ ಮತ್ತು ಎಲ್ಲಾ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕರಪತ್ರಗಳನ್ನು ವಿತರಿಸಲಾಗಿದೆ. 6 ಜಾಥಾಗಳನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಸಹಯೋಗದಲ್ಲಿ ಮಹಿಳೆಯರಿಗಾಗಿ 2 ವಿಶೇಷ ಕಾನೂನು ಅರಿವು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾಡಳಿತದಿಂದ ಸಹಕಾರ: ಗ್ರಾಮೀಣ ಭಾಗದಲ್ಲಿ ಕೋವಿಡ್-19 ಲಸಿಕೆ ಪಡೆದುಕೊಳ್ಳಲು ಜನರ ಮನವೊಲಿಸಲಾಗಿದೆ. ನಮ್ಮ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ವಕೀಲರ ಸಂಘಗಳಿಂದ, ನಗರಸಭೆ ಹಾಗೂ ಸಾರ್ವಜನಿಕ ಇಲಾಖೆಯಿಂದ ಸಹಾಯ ಸಹಕಾರ ಸಿಕ್ಕಿದೆ ಎಂದು ಇದೆ ವೇಳೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿದ್ರಾಮ ಟಿ.ಪಿ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅಶೋಕ ಮಾನೂರೆ ಹಾಗೂ ಇತರರು ಇದ್ದರು.