ಕಾನೂನು ಸಮರಕ್ಕೆ ಪ್ರಜ್ವಲ್ ಸಿದ್ಧತೆ

ಹಾಸನ, ಸೆ.೨-ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಸಂಸದ ಸ್ಥಾನದಿಂದ ಅನರ್ಹ ತೀರ್ಪು ಎದುರಿಸುತ್ತೀರುವ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇನೆ. ಅಲ್ಲದೆ, ಇದು ದೇವರ ಪರೀಕ್ಷೆ ಅಷ್ಟೇ ಎಂದರು. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು. ಅದರ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು.
ಹಾಗಾಗಿ ಮುಂದೇನು ಮಾಡಬೇಕು? ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್?ಗೆ ಹಾಜರಾಗುತ್ತಿದ್ದೇನೆ. ಯಾವ ವಿಚಾರದಲ್ಲಿ ತೀರ್ಪು ಬಂದಿದೆ ಎಂದು ನೋಡಬೇಕಾಗುತ್ತದೆ. ಹಾಗೆಯೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದರು.

ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ನಿನ್ನೆ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಎ.ಮಂಜು ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿತು.