ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮ

ಸಿಎಂ-ಪರಂ ಭೇಟಿ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಸೆ.೨೩:ರಾಜ್ಯದಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಪರಮೇಶ್ವರ್ ಸೂಚಿಸಿದ್ದಾರೆ.
ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ ಗೃಹ ಸಚಿವರು ಕಾವೇರಿ ವಿಚಾರವಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಸಿದ್ದರಾಮಯ್ಯರವರಿಗೆ ಮಾಹಿತಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜತೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಚರ್ಚೆ ನಡೆಸಿದ್ದೇನೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದ ರೀತಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಹೇಳಿದರು.
ಸರ್ಕಾರ ಎಲ್ಲ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದೆ. ಇದು ಯಾವುದೋ ಒಬ್ಬ ವ್ಯಕ್ತಿಯ ಪ್ರಶ್ನೆಯಲ್ಲ, ಇಂತಹ ಪರಿಸ್ಥಿತಿಯಲ್ಲಿ ನಾವೇ ಕಿತ್ತಾಡಿಕೊಂಡರೆ ಇದರ ಲಾಭವನ್ನು ಬೇರೆಯವರು ಪಡೆಯುತ್ತಾರೆ. ಮುಖ್ಯಮಂತ್ರಿಗಳು ಈಗಾಗಲೇ ಎಲ್ಲ ಪಕ್ಷಗಳ ನಾಯಕರನ್ನು ಕರೆದು ಸರ್ವ ಪಕ್ಷ ಸಭೆ ನಡೆಸಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ರಾಜ್ಯದ ಕಾನೂನು ತಜ್ಞರು ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದರು.
ಕಾವೇರಿ ನದಿ ನೀರು ವಿಚಾರದಲ್ಲಿ ರಾಜಕೀಯ ಮಾಡಿದರೆ ಪ್ರಯೋಜನವಿಲ್ಲ, ಪ್ರತಿಭಟನೆ ಮಾಡಬೇಕು ನಿಜ, ರೈತರಿಗೆ ಅನ್ಯಾಯವಾಗಿರುವುದು ತಮಿಳುನಾಡಿಗೆ ಗೊತ್ತಾಗಬೇಕು, ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಬೇಡಿ ಎಂದು ಅವರು ಮನವಿ ಮಾಡಿದರು.
ಮುನ್ನೆಚ್ಚೆರಿಕೆ ಕ್ರಮವಾಗಿ ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.