ಕಾರ್ಖಾನೆಯಲ್ಲಿ ಅಗ್ನಿ ದುರಂತ :18 ಮಂದಿ ಸಾವು

ಮುಂಬೈ,ಜೂ.7- ಮಹಾರಾಷ್ಟ್ರದ ಪುಣೆಯಲ್ಲಿರುವ ಸ್ಯಾನಿಟೈಸರ್ ಉತ್ಪಾದಿಸುವ ರಾಸಾಯನಿಕ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ 18 ಮಂದಿ ಸಾವನ್ನಪ್ಪಿ ಅನೇಕ ಮಂದಿ ಕಾಣೆ ಆಗಿರುವ ಘಟನೆ ನಡೆದಿದೆ.

ರಾಸಾಯನಿಕ ಉತ್ಪಾದನಾ ಕಾರ್ಖಾನೆಯಲ್ಲಿ ದೊಡ್ಡಮಟ್ಟದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ 6 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಇನ್ನೂ ಹಲವು ಮಂದಿ ಕಾರ್ಖಾನೆಯಲ್ಲಿ ಸಿಲುಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಯಾನಿಟೈಸ್ ಉತ್ಪಾದನೆ ಮಾಡುವ ಕಾರ್ಖಾನೆಯಲ್ಲಿ 37 ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 18 ಮಂದಿ ಸಾವನ್ನಪ್ಪಿದ್ದು ಕೆಲವರು ಅದರ ಒಳಗೆ ಸಿಲುಕಿದ್ದು ಅವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಗ್ನಿಶಾಮಕ ಸಿಬ್ಬಂದಿಗಳು ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ತುರ್ತು ದ್ವಾರದಿಂದ ಹೊರಗಡೆ ಬಂದಿದ್ದಾರೆ ಇನ್ನು ಕೆಲವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಇದರಿಂದಾಗಿ ಹೆಚ್ಚಿನ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣ ನಿಗೂಢ:

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಹೇಗೆ ಕಾಣಿಸಿಕೊಂಡ ಕುರಿತು ಇನ್ನೂ ಕಾರಣ ನಿಗೂಡವಾಗಿದೆ.

ಕಾರ್ಖಾನೆಯಲ್ಲಿ 37 ಜನರು ಕೆಲಸ ಮಾಡುತ್ತಿದ್ದು ಅದರಲ್ಲಿ 20 ಜನರನ್ನು ಮಾತ್ರ ರಕ್ಷಣೆ ಮಾಡಲಾಗಿದೆ ಇನ್ನೂ 17 ಕಾಣೆಯಾಗಿದ್ದಾರೆ ಎಂದು ಕಾರ್ಖಾನೆಯ ಮೂಲಗಳು ತಿಳಿಸಿವೆ.

ಪ್ರಧಾನಿ ತೀವ್ರ ಸಂತಾಪ:

ಪುಣೆಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 18ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಮೃತಪಟ್ಟ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.