ಕಾರ್‌ ಸಹಿತ ವ್ಯಕ್ತಿಯ ಸುಟ್ಟು ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕುಂದಾಪುರ, ಜು.೧೯- ಬೈಂದೂರು ಒತ್ತಿನೆಣೆ ಸಮೀಪದ ಹೇನಬೇರು ಎಂಬಲ್ಲಿ ಕಾರು ಸಹಿತ ವ್ಯಕ್ತಿಯೊಬ್ಬರನ್ನು ಸುಟ್ಟು ಕೊಲೆಗೈದ ಪ್ರಕರಣದ ನಾಲ್ವರು ಬಂಧಿತ ಆರೋಪಿಗಳಿಗೆ ಆಗಸ್ಟ್‌ 1ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕುಂದಾಪುರ ಜೆಎಂಎಫ್‌ಸಿ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ.
ಬಂಧಿತ ಪ್ರಮುಖ ಆರೋಪಿಗಳಾದ ಸದಾನಂದ ಶೇರಿಗಾರ್, ಶಿಲ್ಪಾ ಸಾಲ್ಯಾನ್ ಅವರನ್ನು ಜೂ.14ರಂದು ಹಾಗೂ ಆರೋಪಿಗಳಿಗೆ ಸಹಕರಿಸಿದ ಸತೀಶ್ ದೇವಾಡಿಗ, ನಿತಿನ್ ದೇವಾಡಿಗ ಜೂ.15ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಪ್ರಮುಖ ಆರೋಪಿಗಳಿಬ್ಬರ ಕಸ್ಟಡಿ ಅವಧಿ ಸೋಮವಾರಕ್ಕೆ ಮುಗಿದಿದ್ದು ಇನ್ನಿಬ್ಬರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಮುಗಿಯಲಿದೆ. ಮಹಜರು, ಪಂಚನಾಮೆ, ಆರೋಪಿಗಳ ಹೇಳಿಕೆ, ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವ ಎಲ್ಲಾ ತನಿಖಾ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಪ್ರಕರಣದ ತನಿಖಾಧಿಕಾರಿ ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದ ಪೊಲೀಸರ ತಂಡ ಸೋಮವಾರ ಸಂಜೆ ಕುಂದಾಪುರ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಧನೇಶ್ ಮುಗಳಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಸದಾನಂದ, ಸತೀಶ್, ನಿತಿನ್ನನ್ನು ಹಿರಿಯಡಕ ಸಬ್ಜೈಲ್ ಹಾಗೂ ಮಹಿಳಾ ಆರೋಪಿ ಶಿಲ್ಪಾಳನ್ನು ಶಿವಮೊಗ್ಗ ಜೈಲಿಗೆ ಕಳುಹಿಸಲಾಯಿತು. ಪ್ರಾಸಿಕ್ಯೂಶನ್ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ವರ್ಷಾಶ್ರೀ ವಾದಿಸಿದ್ದರು. ಪ್ರಕರಣವೊಂದರಲ್ಲಿ ಶಿಕ್ಷೆ ಆಗುವ ಭಯದಿಂದ ಸದಾನಂದ ಶೇರಿಗಾರ್, ತನ್ನದೇ ಕಾರಿನಲ್ಲಿ ಆತ್ಮಹತ್ಯೆಗೆ ಶರಣಾದಂತೆ ನಾಟಕ ಸೃಷ್ಟಿ ಮಾಡಿ ಸಂಚು ಮಾಡಿದ್ದು, ಅದಕ್ಕಾಗಿ ತನ್ನ ಪ್ರೇಯಸಿ ಜೊತೆ ಸೇರಿ ಆನಂದ ದೇವಾಡಿಗ ಎಂಬವರಿಗೆ ವಯಾಗ್ರ ಮಾತ್ರೆ ಎಂದು ನಂಬಿಸಿ ನಿದ್ರೆ ಮಾತ್ರೆ ಬೆರೆಸಿದ ಮದ್ಯ ನೀಡಿ ಪ್ರಜ್ಞೆ ತಪ್ಪಿಸಿ ಕಾರಿನಲ್ಲಿ ಕಾರ್ಕಳದಿಂದ ಬೈಂದೂರು ಶಿರೂರು ಸಮೀಪದ ಹೇನಬೇರು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದಿದ್ದರು. ಅಲ್ಲಿ ಜು.12ರ ನಸುಕಿನ ವೇಳೆ ಕಾರಿಗೆ ಪೆಟ್ರೋಲ್ ಹಾಕಿ ಆನಂದ ದೇವಾಡಿಗ ಸಹಿತ ಕಾರನ್ನು ಸುಟ್ಟು ಕೊಲೆ ಮಾಡಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.