ಬೆಳಗಾವಿ, ಜೂ.8 ಸ್ಮಾರ್ಟ್ ಸಿಟಿ ಯೋಜನೆಯ ಸಮರ್ಪಕ ಅನುಷ್ಠಾನ; ಕುಡಿಯುವ ನೀರು ಸರಬರಾಜು; ಆರೋಗ್ಯ ಸೌಲಭ್ಯ, ಕಸ ವಿಲೇವಾರಿ; ಸ್ಮಶಾನ ಅಭಿವೃದ್ಧಿ, ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಸರಬರಾಜು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರ ಸಮಸ್ಯೆಗಳನ್ನು ಅರಿತುಕೊಂಡು ಅವುಗಳನ್ನು ಪರಿಹರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸ್ಮಾರ್ಟ್ ಸಿಟಿ, ಹೆಸ್ಕಾಂ ಸೇರಿದಂತೆ ಪ್ರಮುಖ ಇಲಾಖೆಯ ಪ್ರತ್ಯೇಕವಾದ ಸಭೆ ನಡೆಸಲಾಗುವುದು.
ಅಧಿಕಾರಿಗಳಿಗೆ ಸ್ವಲ್ಪಮಟ್ಟಿಗೆ ಸಮಯ ನೀಡಲಾಗುವುದು. ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಬೇಕು. ಮಹಾನಗರ ಪಾಲಿಕೆಯ ಸದಸ್ಯರು ತಿಳಿಸಿದ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದರು.
ನಾಲ್ಕು ಕಡೆಗಳಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಕೂಡಲೇ ಪ್ರಸ್ತಾವ ಸಿದ್ಧಪಡಿಸಬೇಕು. ಸರಕಾರದಿಂದ ಅಗತ್ಯವಿರುವ ಅನುಮೋದನೆ ಕೊಡಿಸಲಾಗುವುದು ಎಂದರು.
ನಗರದಲ್ಲಿ ಆರಂಭಿಸಲಾಗಿರುವ ಆರು ಇಂದಿರಾ ಕ್ಯಾಂಟೀನ್ ಗಳು ಯಾವ ರೀತಿ ನಡೆಸಲಾಗುತ್ತದೆ ಎಂದು ಪ್ರಶ್ನಿಸಿದ ಅವರು, ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಜನರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.
ಕುಟುಂಬ ಸಮೇತ ಅನೀರಿಕ್ಷಿತ ಭೇಟಿ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಭೆಯಲ್ಲಿ ಮಾತನಾಡಿದ ನಾಗರಿಕ ರಾಜೀವ್ ಟೋಪಣ್ಣವರ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಹಾಗೂ ಥರ್ಡ್ ಪಾರ್ಟಿ ಇನ್ಸಪೆಕ್ಷನ್ ಜವಾಬ್ದಾರಿಯನ್ನು ಐಐಟಿ ಅಂತಹ ಪ್ರತಿಷ್ಠಿತ ಸಂಸ್ಥೆಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಸಿದಗೌಡ ಮೋದಗಿ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಕೂಡ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮುಂಚೆಯಿಂದಲೂ ದೂರುಗಳು ಬಂದಾಗ ಪರಿಶೀಲಿಸಲಾಗಿದೆ. ಈಗಲೂ ಯಾವುದೇ ಕಾಮಗಾರಿಗಳ ಬಗ್ಗೆ ದೂರುಗಳಿದ್ದರೆ ಅವುಗಳ ಬಗ್ಗೆ ಯಾವುದೇ ಸಂಸ್ಥೆಯಿಂದಲಾದರೂ ಸೂಕ್ತ ತನಿಖೆ ನಡೆಸಬಹುದು ಎಂದು ಶಾಸಕ ಅಭಯ್ ಪಾಟೀಲ ತಿಳಿಸಿದರು. ಸಭೆಯಲ್ಲಿ ಮತ್ತಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.