ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ: ಸಿಎಂ

ಸಂಜೆವಾಣಿ ನ್ಯೂಸ್
ಮೈಸೂರು: ಸೆ.27:- ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ, ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದರು.
144 ಸೆಕ್ಷನ್ ಜಾರಿ: ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಬಿಜೆಪಿ ಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು. ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ, ರಾಜಕೀಯ ಲಾಭಕ್ಕಾಗಿ ವಿಷಯವನ್ನು ರಾಜಕಾರಣ ಮಾಡಬಾರದು ಎಂದರು.
ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಎಂಕೆ ತಮಿಳುನಾಡಿನವರು. ಬಿಜೆಪಿ ಎಐಎಡಿಎಂಕೆ ಜೊತೆಗಿತ್ತು. ಅವರನ್ನು ಏನೆಂದು ಹೇಳಬೇಕು ಎಂದು ಪ್ರಶ್ನಿಸಿದರು. ರಾಜಕಾರಣಕ್ಕೆ ಏನೇನೋ ಹೇಳಬಾರದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ ಎಂದರು.
ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು ನಾವಾಗಿದ್ದೇವೆ. ಎಐಎಡಿಎಂಕೆ ಹೊರಗೆ ಬರುತ್ತಿದ್ದಾರೆ, ಮತ್ತೊಂದೆಡೆ ಜೆಡಿಎಸ್ ನಿಂದ ಮುಸ್ಲಿಂರು ಹೊರಗೆ ಬರುತ್ತಿದ್ದು, ಬಿಜೆಪಿ ವಿರುದ್ಧ ಧ್ರುವೀಕರಣವಾಗಿಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಡೀ ದೇಶದಲ್ಲಿ ಬಿಜೆಪಿ ವಿರುದ್ಧ ವಾದ ಶಕ್ತಿಗಳು ಒಂದುಗೂಡುವ ಕೆಲಸವಾಗುತ್ತಿದೆ. ಏಕೆಂದರೆ ಬಿಜೆಪಿ ಕಳೆದ 9 ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ. ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಅದಕ್ಕಾಗಿ ಈ ಸತ್ಯ ಗೊತ್ತಾದ ಮೇಲೆ ಅನೇಕ ಶಕ್ತಿಗಳು ಒಂದಾಗಿ ಬಿಜೆಪಿಯೇತರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಬಗ್ಗೆ ಮಾತನಾಡಿ, ಯಾವ ಬಂದ್ ಬೇಕಾದರೂ ಮಾಡಲಿ. ಆದರೆ, ಬಂದ್, ಮೆರವಣಿಗೆ, ಪ್ರತಿಭಟನೆ ಮಾಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿದೆ. ನಾವೇನು ಅಡ್ಡಿಪಡಿಸಲು ಹೋಗುವುದಿಲ್ಲ ಎಂದರು.
ಭಾರತೀಯ ವೈದ್ಯಕೀಯ ಮಂಡಳಿಯು ಪ್ರವೇಶ ಪರೀಕ್ಷೆ ಯಲ್ಲಿ ಶೂನ್ಯ ಅಂಕ ಪಡೆದರೂ ವೈದ್ಯಕೀಯ ಸೀಟು ಪಿಜಿಯಲ್ಲಿ ಪಡೆಯಬಹುದು ಎಂದು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದು ಸರಿಯಲ್ಲ. ಮೆರಿಟ್ ಮೇಲೆ ಸೀಟು ಹಂಚಿಕೆ ಮಾಡಬೇಕು. ಶೂನ್ಯ ಪಡೆದರೂ ಸೀಟು ನೀಡಿದರೆ, ಕ್ಯಾಪಿಟೇಶನ್ ಗೆ ಬೆಂಚ್ ಮಾರ್ಕ್ ಸೃಷ್ಟಿಸಿದಂತಾಗುವುದು ಎಂದರು.
ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕೆಂದರು.
ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.
ಕಾವೇರಿ ವಿವಾದದ ವಿಷಯವಾಗಿ ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸಿಕೊಳ್ಳಲು ಸಿದ್ಧವಿದೆಯೆ ಎಂಬುದಕ್ಕೆ ಉತ್ತರಿಸಿ, ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ, ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ಧ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದಕ್ಕೆ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು, ರಾಜ್ಯ ಸರ್ಕಾರ ಕಾವೇರಿ ಬಗ್ಗೆ ವಾದವನ್ನು ಸಮರ್ಥವಾಗಿ ಮಂಡಿಸಿಲ್ಲ ಎಂಬ ಟೀಕೆಗೆ ಉತ್ತರಿಸುತ್ತಾ, ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ವಾಸ್ತವ ಪರಿಸ್ಥಿತಿಯ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದರೂ ಕೂಡ 5000 ಕ್ಯೂಸೆಕ್ಸ್ ನೀರು ಬಿಡಲು ಸೂಚಿಸಿದ್ದಾರೆ. ಇಂದು ಪುನ: ಕಾವೇರಿ ವಿವಾದದ ವಿಚಾರಣೆ ಇದ್ದು, ರಾಜ್ಯ ಸರ್ಕಾರ ಸಮರ್ಥ ವಾದಮಂಡನೆ ಮಾಡಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಡಿ.ರವಿಶಂಕರ್, ಹರೀಶ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಇನ್ನಿತರರು ಉಪಸ್ಥಿತರಿದ್ದರು.