
(ಸಂಜೆವಾಣಿ ಪ್ರತಿನಿಧಿಯಿಂದ)
ಕಾವೇರಿ ನದಿ ನೀರು ವಿವಾದ ಕುರಿತಂತೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಸಚಿವರಾದ ಎಚ್.ಕೆ. ಪಾಟೀಲ್, ಚಲುವರಾಯ ಸ್ವಾಮಿ ಇದ್ದಾರೆ.
ಬೆಂಗಳೂರು,ಆ.೨೩:ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮಾಡುವ ತೀರ್ಮಾನವನ್ನು ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಮಳೆ ಕೊರತೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಜತೆಗೆ ಕಾನೂನಿನ ಮೂಲಕವೇ ಸಂಕಷ್ಟ ಪರಸ್ಥಿತಿಗೆ ಪರಿಹಾರ ಕಂಡುಕೊಳ್ಳಲು ಸರ್ವ ಪಕ್ಷ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
ಕಾವೇರಿ ನೀರಿನ ತನ್ನ ಪಾಲಿನ ನೀರನ್ನು ಕರ್ನಾಟಕ ಹರಿಸುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳಲು ಹಾಗೂ ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಸೇರಿದಂತೆ ವಿವಿಧ ಜಲವಿವದಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಂಕಷ್ಟ ಪರಿಸ್ಥಿತಿಯ ಬಗ್ಗೆ ಚರ್ಚೆಗಳಾಗಿದ್ದು, ತಮಿಳುನಾಡಿಗೆ ಕಾನೂನಿನ ಮೂಲಕವೇ ಉತ್ತರ ನೀಡುವ ಬಗ್ಗೆ ತೀರ್ಮಾನ ಮಾಡಲಾಗಿದೆ.
ತಮಿಳುನಾಡು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ಮೇಲ್ಮನವಿ ಸಲ್ಲಿಸುವ ಜತೆಗೆ ಸಂಕಷ್ಟ ಪರಿಸ್ಥಿತಿಗೆ ಕಾನೂನಿನಡಿಯಲ್ಲೇ ಪರಿಹಾರ ಕಂಡುಕೊಳ್ಳುವ ಮಹತ್ವದ ತೀರ್ಮಾನವನ್ನು ಈ ಸಭೆಯಲ್ಲಿ ಮಾಡಲಾಗಿದೆ.
ಕಾವೇರಿ ಉಸ್ತುವಾರಿ ಪ್ರಾಧಿಕಾರ ತಮಿಳುನಾಡಿಗೆ ಆಗಸ್ಟ್ ೩೧ರವರೆಗೆ ಪ್ರತಿದಿನ ೧೦ ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಆದೇಶಿಸಿದ್ದು, ಕಾವೇರಿ ಕೊಳ್ಳದ ಜಲಾಶಯಗಳು ಭರ್ತಿಯಾಗದ ಕಾರಣ ಕರ್ನಾಟಕ ಇಷ್ಟು ಪ್ರಮಾಣದ ನೀರು ಹರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಹಾಗಾಗಿ ರಾಜ್ಯ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಇಂದಿನ ಸರ್ವಪಕ್ಷ ಸಭೆಯಲ್ಲಿ ಸಮಗ್ರವಾಗಿ ಚರ್ಚೆಸಲಾಗಿದ್ದು, ಕಾನೂನಿನ ಹೋರಾಟ ನಡೆಸಲು ನಿರ್ಧರಿಸಲಾಗಿದೆ.
ರಾಜ್ಯದ ಹಿತ ರಾಜಿ ಇಲ್ಲ:ಡಿಕೆಶಿ
ಸಭೆಯ ಆರಂಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ರವರು ನೀರಾವರಿ ವಿಷಯದಲ್ಲಿ ರಾಜ್ಯ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿ ಕಾವೇರಿ ಸೇರಿದಂತೆ ಜಲವಿವಾದದ ಬಗ್ಗೆ ರಾಜ್ಯದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷದ ಮುಖಂಡರು ಸಹಕಾರ ನೀಡಬೇಕು ಎಂದು ಕೋರಿದರು.
ನೀರಾವರಿ ವಿಷಯದಲ್ಲಿ ರಾಜಕೀಯ ಪಕ್ಕಕ್ಕಿಡೋಣ ರಾಜ್ಯ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ, ಎಲ್ಲರೂ ಒಟ್ಟಾಗಿ ರಾಜ್ಯದ ಹಿತ ಕಾಯೋu ಎಂದರು.
ಇದಕ್ಕೂ ಮೊದಲು ಸಭೆಯಲ್ಲಿ ರಾಜ್ಯದ ಅಡ್ವಕೇಟ್ ಜನರಲ್ ಶಶಿಕಿರಣ್‌ಶೆಟ್ಟಿ ಅವರು ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜುಲೈವರೆಗಿನ
ಮಳೆಯ ಕೊರತೆಯನ್ನು ಗಮನಿಸಿದೆ. ಆ.೧೦ರಂದು ೧೫,೦೦೦ ಕ್ಯೂಸೆಕ್ ನೀರು ಬಿಡಲು ಸೂಚಿಸಿತ್ತು. ಇದನ್ನು ರಾಜ್ಯಸರ್ಕಾರ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣವನ್ನು ೧೦ ಸಾವಿರ ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿನೀರು ಬಿಡುಗಡೆಗೆ ಮನವಿ ಮಾಡಿದೆ. ನಾಡಿದ್ದು ಶುಕ್ರವಾರ (ಆ.೨೫)ರಂದು ಮೂವರು ನ್ಯಾಯಾಧೀಶರ ಪೀಠದ ಮುಂದೆ ಅರ್ಜಿಯ ವಿಚಾರಣೆ ಬರಲಿದೆ ಎಂಬ ಮಾಹಿತಿಯನ್ನು ಸಭೆಗೆ ನೀಡಿದರು.
ಕಾನೂನು ಹೋರಾಟಕ್ಕೆ ಬೆಂಬಲ
ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಡಿ.ವಿ ಸದಾನಂದಗೌಡ, ವೀರಪ್ಪ ಮೊಯ್ಲಿ, ಸಂಸದರಾದ ಸುಮಲತಾ, ಜಗ್ಗೇಶ್ ಡಾ.ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ ಸಿದ್ದೇಶ್ವರ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಹಾಗೂ ಸಂಕಷ್ಟ ಸೂತ್ರವನ್ನು ನಿರ್ದಿಷ್ಟಪಡಿಸುವ ಅಗತ್ಯತೆಯನ್ನು ಪ್ರತಿಪಾದಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪಮೊಯ್ಲಿ, ಸಚಿವರಾದ ಚೆಲುವರಾಯಸ್ವಾಮಿ, ಡಾ, ಜಿ. ಪರಮೇಶ್ವರ್ P.ಜೆ ಜಾರ್ಜ್, ಕೃಷ್ಣಭೈರೇಗೌಡ, ಹೆಚ್.ಕೆ ಪಾಟೀಲ್ ಸೇರಿದಂತೆ ಹಲವು ಸಚಿವರು, ವಿವಿಧ ಪಕ್ಷಗಳ ಮುಖಂಡರು, ಸಂಸದರು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್‌ಸಿಂಗ್, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಸೇರಿದಂತೆ ಕಾನೂನು ತಜ್ಞರು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.