ಕಿರುಸಾಲ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮವಹಿಸಿ: ರಾಮಚಂದ್ರನ್ ಆರ್

ಬೀದರ ನ 12: ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯ ಕಲ್ಪಿಸಲು ಅಗತ್ಯಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಧಾನಮಂತ್ರಿ ಸ್ವನಿಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬೀದಿಬದಿ ವ್ಯಾಪಾರಸ್ಥರಿಂದ 1939 ಅರ್ಜಿಗಳು ಸಲ್ಲಿಕೆಯಾಗಿದ್ದು, 238 ಅರ್ಜಿಗಳು ಇತ್ಯರ್ಥವಾಗಿವೆ. ಬಾಕಿ ಉಳಿದ ಅರ್ಜಿಗಳ ವಿಲೇವಾರಿಗೆ ಗಮನ ಹರಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶದ ಬೀದಿಬದಿ ವ್ಯಾಪಾರಿಗಳು ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟ ಎದುರಿಸಿದ್ದಾರೆ. ಅವರಿಗೆ ಸ್ಪಂದಿಸಬೇಕಿದೆ. ಹೀಗಾಗಿ ವಿವಿಧ ಬ್ಯಾಂಕಗಳಲ್ಲಿ ಬಾಕಿ ಉಳಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಬೀದರ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶರಣಬಸಪ್ಪ ಕೊಟಪ್ಪಗೋಳ ಅವರು ಮಾತನಾಡಿ, ನಗರ ಹಾಗೂ ಪಟ್ಟಣ ಪ್ರದೇಶದ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅರ್ಜಿ ಹಾಕಿದ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಬಿ.ಎಂ.ಕಮತಗಿ, ನಗರಸಭೆ ಪೌರಾಯುಕ್ತರಾದ ರವಿಂದ್ರನಾಥ ಅಂಗಡಿ, ಹುಮನಾಬಾದ್, ಬಸವಕಲ್ಯಾಣ, ಭಾಲ್ಕಿ, ಚಿಟಗುಪ್ಪಾ, ಔರಾದ್, ಹಳ್ಳಿಖೇಡ್ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಸೇರಿದಂತೆ ಇನ್ನೀತರ ಅಧಿಕಾರಿಗಳು ಉಪಸ್ಥಿತರಿದ್ದರು.