ಕುಕ್ಕೆ : ಈ ಬಾರಿಯೂ ಎಡೆಸ್ನಾನ ನಿಷೇಧ

ಕುಕ್ಕೆ, ಡಿ. ೭- ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಈ ಬಾರಿಯೂ ಎಡೆಸ್ನಾನ ಆಚರಣೆಗೆ ನಿಷೇಧ ಹೇರಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಅತ್ಯಂತ ಪುರಾತನ ಕಾಲದಿಂದಲೂ ಆಚರಣೆಯಲ್ಲಿರುವ ಎಡೆಸ್ನಾನ ಈ ಹಿಂದೆ ಮಡೆಸ್ನಾನ ಎನ್ನುವ ಹೆಸರಿನಲ್ಲಿ ಗುರುತಿಸಿಕೊಂಡಿದ್ದ ಈ ಸೇವೆಯನ್ನು ಇತ್ತೀಚಿನ ಕೆಲವು ವರ್ಷಗಳ ಹಿಂದೆ ಎಡೆಸ್ನಾನ ಎನ್ನುವ ರೀತಿಯಲ್ಲಿ ಮಾರ್ಪಾಡು ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ಈ ಸೇವೆಯನ್ನು ಮಾಡಲು ಭಕ್ತಾಧಿಗಳಿಗೆ ಅವಕಾಶ ನಿರಾಕರಿಸಲಾಗಿತ್ತು. ಚಂಪಾಷಷ್ಠಿ ಮಹೋತ್ಸವದ ಹಿನ್ನಲೆಯಲ್ಲಿ ಕುಕ್ಕೆಯಲ್ಲಿ ಮೂರು ದಿನಗಳ ಕಾಲ ಈ ಸೇವೆಯನ್ನು ಆಚರಿಸಲು ಅವಕಾಶ ನೀಡಲಾಗಿದೆ.
ಚೌತಿ, ಪಂಚಮಿ ಮತ್ತು ಷಷ್ಠಿ ದಿನದಂದು ಈ ಸೇವೆಯನ್ನು ಕ್ಷೇತ್ರದಲ್ಲಿ ಮಾಡಲಾಗುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕ್ಷೇತ್ರದ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ಕ್ಷೇತ್ರದಲ್ಲಿ ನಡೆಯುವ ಇತರ ಸೇವೆಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವ, ಬೀದಿ ಮಡೆಸ್ನಾನ ಸೇರಿದಂತೆ ಇತರ ಸೇವೆಗಳಿಗೆ ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ನಡೆಸಲು ಜಿಲ್ಲಾಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ.