ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜ.೧೮; ಜಿಲ್ಲೆಯಲ್ಲಿ ಬರುವ ಬೇಸಿಗೆಯಲ್ಲಿ ಅಂದಾಜು 278 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಸಾಧ್ಯತಗಳಿದ್ದು, ಇಂತಹ ಸಮಸ್ಯಾತ್ಮಕ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಹೊಸದುರ್ಗ ತಾಲ್ಲೂಕಿನಲ್ಲಿ 36, ಚಳ್ಳಕೆರೆ-32, ಚಿತ್ರದುರ್ಗ-43, ಮೊಳಕಾಲ್ಮೂರು-67, ಹಿರಿಯೂರು-57 ಹಾಗೂ ಹೊಳಲ್ಕೆರೆ-43 ಸೇರಿದಂತೆ ಒಟ್ಟು 278 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಂಭವವಿದೆ.  ಹೀಗಾಗಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆ ಮಾಡಲು ಈಗಾಗಲೆ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.  ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಮಾತನಾಡಿ, ಬರ ಪರಿಸ್ಥಿತಿಯ ತುರ್ತು ನಿರ್ವಹಣೆಗಾಗಿ ಜಿಲ್ಲೆಗೆ ಈಗಾಗಲೆ 09 ಕೋಟಿ ರೂ. ಬಿಡುಗಡೆಯಾಗಿದೆ.  ಇದರಲ್ಲಿ ಮೇವು ಪೂರೈಕೆ, ಟ್ಯಾಂಕರ್ ಮೂಲಕ ನೀರು ಸರಬರಾಜು, ಖಾಸಗಿ ಬೋರ್‍ವೆಲ್ ಬಾಡಿಗೆಗೆ ಪಡೆಯುವುದು ಹಾಗೂ ತುರ್ತು ಪೈಪ್‍ಲೈನ್ ಕಾಮಗಾರಿಗಳಿಗೆ ಹಾಗೂ ತಾತ್ಕಾಲಿಕ ಪರಿಹಾರ ಕಾರ್ಯಗಳಿಗೆ ವಿನಿಯೋಗಿಸಿ, ಬರ ಪರಿಸ್ಥಿತಿ ನಿರ್ವಹಿಸಲಾಗುವುದು ಎಂದರು.  ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿ, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಇರುವ ಕಡೆಗಳಲ್ಲಿ ಬೋರ್‍ವೆಲ್ ಕೊರೆಯಿಸಬೇಕು ಎಂದು ಸೂಚನೆ ನೀಡಿದರು.