ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು:ಜಿಲ್ಲಾಧಿಕಾರಿ ಡಾ.ದಾನಮ್ಮನವರ ಸೂಚನೆ

ವಿಜಯಪುರ:ಜೂ.14: ನಿಗದಿತ ಅವಧಿಯಲ್ಲಿ ವಾಡಿಕೆ ಮಳೆಯಾಗದೇ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಯುದ್ದೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ಕುಡಿಯುವ ನೀರಿನ ಕುರಿತಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡು, ನೀರಿನ ಮೂಲಗಳ ಲಭ್ಯತೆ ಪ್ರಮಾಣದ ಮಾಹಿತಿ ಪಡೆದು, ಅಚ್ಚುಕಟ್ಟು ನಿರ್ವಹಣೆ ಮಾಡುವ ಮೂಲಕ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಆಶಯದಂತೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜನರು ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆಪಡಬಾರದು. ಜನರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಸಭೆ ಕರೆದು ಕುಡಿಯುವ ನೀರಿನ ವಿಷಯದಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರು ಪೂರೈಸುವ ಮುಂಚೆ ಹಲವು ಬಾರಿ ಪರಿಶೀಲಿಸಬೇಕು. ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿರುವ ನೀರು ಸರಬರಾಜು ಟ್ಯಾಂಕ್ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಆಗಾಗ ಟ್ಯಾಂಕ್ ಪರಿಶೀಲನೆ ನಡೆಸಬೇಕು. ನಗರ ಪ್ರದೇಶದಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡು, ಪ್ರತಿ ಮನೆಗೂ ನೀರು ಪೂರೈಸಲು ಅಗತ್ಯ ಸಿದ್ಧತಾ ಕ್ರಮ ವಹಿಸುವಂತೆಯೂ, ಹೆಚ್ಚಿನ ನೀರಿನ ಸಂಗ್ರಹ ಇರುವ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ಬೋರವೆಲ್ ಮಾಲೀಕರೊಂದಿಗೆ ಸಮನ್ವಯ ಸಾಧಿಸಿ ಕ್ರಮವಹಿಸಿ, ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ನೀರು ಸರಬರಾಜು ಮಾಡುವಲ್ಲಿ ಏನಾದರು ತಾಂತ್ರಿಕ ದೋಷ ಉದ್ಭವಿಸಿದ್ದಲ್ಲಿ ಆದ್ಯತೆ ಮೇಲೆ ದುರಸ್ತಿ ಕಾರ್ಯ ಕೈಗೊಂಡು ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. 24 ಗಂಟೆಯೊಳಗಾಗಿ ಸಮಸ್ಯೆ ನಿವಾರಿಸಿಕೊಂಡು ನೀರು ಪೂರೈಕೆಗೆ ಆದ್ಯತೆ ನೀಡಬೇಕು.
ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿಗೆ ನಗರ ಪಟ್ಟಣ ಪಂಚಾಯತ್ ಕುಡಿಯುವ ನೀರು ಪೂರೈಸುವ ಯೋಜನೆಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯುತ್ ಸಮಸ್ಯೆ ಬಂದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಹೆಚ್ಚಿನ ಗಮನ ವಹಿಸುವಂತೆ ಸೂಚನೆ ನೀಡಿದರು. ಈಗಾಗಲೇ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಸಣ್ಣ ಪುಟ್ಟ ದುರಸ್ತಿ ಇತರೆ ಕಾಮಗಾರಿಗಳ ವಿಳಂಬ ಮಾಡದೇ ತಕ್ಷಣವೇ ಅನುಮೋದನೆ ಪಡೆದುಕೊಂಡು, ಕಾಮಗಾರಿಗಳನ್ನು ಆದ್ಯತೆ ಮೇಲೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆಯೂ, ಸಾರ್ವಜನಿಕರಿಂದ ಕುಡಿಯುವ ನೀರಿನ ಕುರಿತಾಗಿ ಕುಂದು ಕೊರತೆಗಳಿದ್ದಲ್ಲಿ ಅಧಿಕಾರಿಗಳು ತತ್ ಕ್ಷಣ ಸ್ಪಂದಿಸಿ ಕಾರ್ಯ ಪ್ರವೃತ್ತರಾಗಿ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರು ಮಾತನಾಡಿ, ಮುಖ್ಯಮಂತ್ರಿಗಳು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಭೆ ನಡೆಸಿ ಸೂಚನೆಯ ನೀಡಿರುವ ಹಿನ್ನೆಲೆಯಲ್ಲಿ, ಕುಡಿಯುವ ನೀರಿಗೆ ಪ್ರಥಮಾದ್ಯತೆ ನೀಡಿ ಯಾವುದೇ ಸಮಸ್ಯೆಗಳು ಬಾರದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ ಸ್ಥಾಪಿಸಿದ ಕುಡಿಯುವ ನೀರಿನ ಘಟಕಗಳ ಮಾಹಿತಿ ಪಡೆದುಕೊಂಡು, ಅವಶ್ಯವಿದ್ದಲ್ಲಿ ದುರಸ್ತಿ ಮಾಡಿಸಿ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹಳ್ಳಿಯಲ್ಲಿ ಕುಡಿಯುವ ನೀರಿನ ಜಲ ಮೂಲಗಳ ಲಭ್ಯತೆ ಇಲ್ಲದೇ ಇರುವ ಸಂದರ್ಭದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ ಸೇರಿದಂತೆ ಜಿಲ್ಲಾ ನಗರಾಭಿವೃದ್ಧಿ ಕೋಶ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪುರಸಭೆ-ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.