ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಜಿ.ಪಂ ಸಿಇಓ

ಸಂಜೆವಾಣಿ ನ್ಯೂಸ್
ಮೈಸೂರು: ಫೆ.29:- ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಸೂಚಿಸಿದರು.
ಬುಧವಾರ ಟಿ.ನರಸೀಪುರ ತಾಲ್ಲೂಕಿನ ಸೋಮನಾಥಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಿ ಅವರು ಮಾತನಾಡಿದರು. ಬಾಕಿ ಇರುವ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ತ್ವರಿತವಾಗಿ ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ರವರಿಗೆ ತಿಳಿಸಿದರು.
ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣಾ ಕಾಮಗಾರಿಗಳನ್ನು ಅತೀ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ತಿಳಿಸುತ್ತಾ ಈ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಹಿತಿಯನ್ನು ನೀಡಿದರು. ಮಾ.3 ರಂದು ನಡೆಯುವ ಪಲ್ಸ್ ಪೆÇೀಲಿಯೋ ಕಾರ್ಯಕ್ರಮವನ್ನು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಹೆಚ್ಚಿನ ಜನರಿಗೆ ಉದ್ಯೋಗವನ್ನು ಕಲ್ಪಿಸಿಕೊಡುವಂತೆ ಹಾಗೂ ಕಾಮಗಾರಿಗಳಲ್ಲಿ ಮಹಿಳೆಯರು ಹೆಚ್ಚಾಗಿ ಭಾಗವಹಿಸುವಂತೆ ಅರಿವು ಮೂಡಿಸಬೇಕೆಂದು ತಿಳಿಸಿದರು. ತೆರಿಗೆ ವಸೂಲಾತಿಯನ್ನು ಕಡ್ಡಾಯವಾಗಿ ಪಿ ಓ ಎಸ್ ಮಿಷನ್ ಬಳಸಿ ಸಂಗ್ರಹಿಸಬೇಕು. ಬಾಕಿ ಇರುವ ತೆರಿಗೆಯನ್ನು ಶೇ.100 ರಷ್ಟು ವಸೂಲಾತಿಯನ್ನು ಮಾಡಲು ತಿಳಿಸಿದರು.
ಸಂಜೀವಿನಿ ಸಂಘದವರಿಂದ ತಯಾರಾದ ಸಾಂಬಾರು ಪುಡಿ ಮತ್ತು ಉಪ್ಪಿನಕಾಯಿಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಅಂಗಡಿ ವ್ಯವಸ್ಥೆಯನ್ನು ಮಾಡಿ ಕೊಡುವಂತೆ ಪಿ ಡಿ ಒ ರವರಿಗೆ ಸೂಚಿಸಿದರು. ಮಹಿಳಾ ಸಂಘದವರು ನಡೆಸುತ್ತಿರುವ ಬಳೆ ಅಂಗಡಿ, ಸೀರೆ ಅಂಗಡಿ, ಗೊಂಬೆ ಅಂಗಡಿ, ಸಿಗಡಿ ಮತ್ತು ಕರಿಮೀನು ಮಾರಾಟ ಮಾಡಲು ಅನುಕೂಲವಾಗುವಂತೆ ಪಿಡಿಒ ರವರಿಗೆ ಮಾಹಿತಿ ನೀಡಲು ಸೂಚನೆ ನೀಡಿದರು.
ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳು ಹಾಗೂ ರಿಜಿಸ್ಟರ್ ಗಳನ್ನು ಪರಿಶೀಲಿಸಿ ಕಟ್ಟಡವನ್ನು ದುರಸ್ತಿಗೊಳಿಸಲು ಕ್ರಮ ವಹಿಸಬೇಕೆಂದು ತಿಳಿಸಿದರು. ಬೇಸಿಗೆ ಪ್ರಾರಂಭವಾಗಿರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಕೈಲಾಶ್ ಮೂರ್ತಿ, ಎಇ ಮಂಜುನಾಥ್, ಪಿಆರ್ ಇಡಿ ಎಇಇ ಚರಿತ, ಪಿಡಿಒ ಶಶಿಕುಮಾರ್, ಕಾರ್ಯದರ್ಶಿ ಸುಧೀರ್ ಸೇರಿ ಇತರರು ಹಾಜರಿದ್ದರು.