ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ: ಜಿಲ್ಲಾಧಿಕಾರಿ

ಸಂಜೆವಾಣಿ ವಾರ್ತೆ
ಚಾಮರಾಜನಗರ.ಮಾ.07:- ಮುಂಬರುವ ತಿಂಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಹುದಾದ ಗ್ರಾಮಗಳಿಗೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಯಾವುದೇ ಸಮಸ್ಯೆಯಾಗದಂತೆ ಪೂರ್ವ ಸಿದ್ದತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂದೆ ಬರುವ ಅವಧಿಯಲ್ಲಿ ಕುಡಿಯುವ ನೀರಿನತೊಂದರೆ ಕಾಣಿಸಿಕೊಳ್ಳಬಹುದಾದ ಗ್ರಾಮಗಳ ಪಟ್ಟಿಯನ್ನು ಮಾಡಲಾಗಿದ್ದು, ಈ ಗ್ರಾಮಗಳಿಗೆ ಕುಡಿಯುವ ನೀರಿನ ಕೊರತೆಯಾಗದಿರಲು ವಹಿಸಬೇಕಿರುವ ಕ್ರಮಗಳಿಗೆ ಈಗಿನಿಂದಲೇ ಸಿದ್ದತೆ ಮಾಡಬೇಕು. ನೀರಿನ ಸಮಸ್ಯೆ ಕಾಡಬಹುದಾದ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲು ಒಪ್ಪಂದ ಪ್ರಕ್ರಿಯೆ ಸೇರಿದಂತೆ ಇನ್ನಿತರ ಕ್ರಮಗಳಿಗೆ ಅಧಿಕಾರಿಗಳು ತುರ್ತಾಗಿ ಮುಂದಾಗಬೇಕು. ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಸಮಪರ್ಕಕವಾಗಿ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಎಲ್ಲಿಯೂತೊಂದರೆ ಯಾಗದಂತೆ ನೋಡಿಕೊಳ್ಳಬೇಕಿದೆ. ನೀರಿನ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರು ಮಾಹಿತಿ ನೀಡುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ. ಸಾರ್ವಜನಿಕರಿಂದ ಸ್ವೀಕೃತವಾಗುವ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಸಮಸ್ಯೆ ಪರಿಹರಿಸಬೇಕು. ಜನರಿಗೆ ಸ್ಪಂದಿಸದಿದ್ದಲ್ಲಿ ಅಧಿಕಾರಿಗಳ ವಿರುದ್ದ ಗಂಭೀರಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಯಾವುದೇ ಯೋಜನೆಗಳಿರಲಿ ತ್ವರಿತವಾಗಿ ಪೂರ್ಣಗೊಳಿಸಬೇಕು. ಕೊರೆಯಲಾಗಿರುವ ಕೊಳವೆ ಬಾವಿಗಳ ಬಾಕಿ ವಿದ್ಯುದ್ದೀಕರಣ ಕೆಲಸವನ್ನು ವಿಳಂಬ ಮಾಡಬಾರದು. ಪರಸ್ಪರ ಸಮನ್ವಯದಿಂದ ಇಲಾಖೆಗಳು ಕುಡಿಯುವ ನೀರಿನ ಕಾಮಗಾರಿಯನ್ನು ಕಾಲಮಿತಿಯೊಳಗೆ ಕೈಗೊಂಡುಜನರಿಗೆ ಅನುಕೂಲ ಕಲ್ಪಿಸಬೇಕು ಎಂದರು.
ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಬೇಕು. ಪರಿಶುದ್ದಕುಡಿಯುವ ನೀರು ಪೂರೈಸಬೇಕು. ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಯಾವುದೇ ದುರಸ್ಥಿ ಕಾರ್ಯಇದ್ದಲ್ಲಿ ಶೀಘ್ರವಾಗಿ ಮುಗಿಸಬೇಕು. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ನಿಗಾವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಜಾನುವಾರುಗಳಿಗೆ ಮೇವು, ನೀರು ಲಭ್ಯವಾಗಬೇಕು. ಹೊರ ರಾಜ್ಯಗಳಿಗೆ ಮೇವು ಸಾಗಿಸುವುದನ್ನು ನಿಬರ್ಂಧಿಸಿ ಈ ಹಿಂದೆಯೇ ಆದೇಶ ಹೊರಡಿಸಲಾಗಿದೆ. ಸ್ಥಳೀಯವಾಗಿ ಮೇವು ದಾಸ್ತಾನು ಇರಬೇಕಿದೆ. ಮೇವಿನ ಕಿಟ್‍ಗಳನ್ನು ವಿತರಿಸಲಾಗಿದೆ. ಈ ಬಗ್ಗೆ ಪರಿಶೀಲಿಸಬೇಕು. ಬರಗಾಲ ನಿರ್ವಹಣೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಧುಸೂಧನ್, ಜಂಟಿ ಕೃಷಿ ನಿರ್ದೇಶಕÀ ಆಬೀದ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಕಾರ್ಯಪಾಲಕ ಎಂಜಿನಿಯರ್ ವಸಂತ್‍ಕುಮಾರ್, ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.