ಬೆಂಗಳೂರು,ಜೂ,೯:ರಾಜ್ಯದ ಯಾವುದೇ ಭಾಗದಲ್ಲಿ ಕುಡಿiವ ನೀರಿನ ಅಭಾವ ಆಗದಂತೆ ಎಚ್ಚರ ವಹಿಸಿ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಸಮರೋಪಾದಿಯಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಬೇಸಿಗೆಯಿಂದಾಗಿ ರಾಜ್ಯದ ಹಲವಾರು ಜಲಾಶಯಗಳು ಹಾಗೂ ಕುಡಿಯುವ ನೀರಿನ ಮೂಲಗಳಿಗೆ ನೀರಿನ ಸಂಗ್ರಹ ಕಡಿಮೆಯಾಗಿ, ಹಲವೆಡೆ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಮುಂಗಾರು ಮಳೆಯೂ ವಿಳಂಬವಾಗಿರುವುದರಿಂದ ಸಮಸ್ಯೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕುಡಿಯುವ ನೀರಿನ ಸಮರ್ಪಕವಾಗಿ ಒದಗಿಸುವ ಸಂಬಂಧ ಸಲಹೆ, ಸೂಚನೆಗಳನ್ನು ನೀಡಿದರು.ರಾಜ್ಯದ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ಆಗಬಾರದು, ಕಳೆದ ವಾರವೇ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇನೆ. ಅದರಂತೆ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಾಕೀತು ಮಾಡಿದರು.ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಯಾವುದೇ ಕಾರಣಕ್ಕೂ ಜನ ಕುಡಿಯುವ ನೀರು ಸಿಗದಂತೆ ಪರಿತಪಿಸಬಾರದು, ಈ ಬಗ್ಗೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.ಸೋಮವಾರ ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿಯೂ ಮುಖ್ಯಮಂತ್ರಿಗಳು ಹೇಳಿ, ಕುಡಿಯುವ ನೀರಿನ ಸಮಸ್ಯೆಗೆ ಸರ್ಕಾರ ಎಲ್ಲ ರೀತಿಯ ನೆರವನ್ನು ಒದಗಿಸಲಿದೆ. ಹಣಕಾಸಿನ ತೊಂದರೆ ಇಲ್ಲ, ಏನಾದರೂ ಸಮಸ್ಯೆಗಳಿದ್ದರೆ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಹೇಳಿದರು.
ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಕೆಲವರು ಮೃತಪಟ್ಟಿರುವ ಪ್ರಕರಣದ ಬಗ್ಗೆಯೂ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಕೂಡಲೇ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕ್ರಮಕೈಗೊಳ್ಳಿ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
೧೦ ಜಲಾಶಯಗಳು ಖಾಲಿ
ಮುಂಗಾರು ಮಳೆ ವಿಳಂಬದಿಂದ ರಾಜ್ಯದ ಕೆಆರ್‌ಎಸ್, ತುಂಗಭದ್ರ, ಲಿಂಗನಮಕ್ಕಿ ಸೇರಿದಂತೆ ೧೦ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಟ ಮಟ್ಟಕ್ಕೆ ಕುಸಿದಿದೆ. ಮಳೆ ಸಕಾಲಕ್ಕೆ ಬಾರದಿದ್ದರೆ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಕೆಆರ್‌ಎಸ್ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ.
ಕೆಆರ್‌ಎಸ್‌ನಲ್ಲಿ ಕೇವಲ ೩ ಟಿಎಂಸಿ ಮಾತ್ರ ನೀರು ಕುಡಿಯಲು ಲಭ್ಯವಿದೆ. ಹಾಗಾಗಿ, ಮಳೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳು ಇವೆ.ಇನ್ನು ಮೂರು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದೆ. ಸಾಮಾನ್ಯವಾಗಿ ಜೂ. ೧ ರಂದು ಮುಂಗಾರು ಆರಂಭವಾಗಬೇಕಿತ್ತು, ರಾಜ್ಯದಲ್ಲಿ ಮುಂಗಾರು ಮಳೆ ಒಂದು ವಾರ ತಡವಾಗಿದೆ. ಇದು ಸಮಸ್ಯೆಗೆ ಕಾರಣವಾಗಿದೆ.