ಕುರುಗೋಡು : ತಾಲೂಕು ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ


ಸಂಜೆವಾಣಿ ವಾರ್ತೆ
ಕುರುಗೋಡು:ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದಂದು ಸಂವಿಧಾನದ ಆಶಯ ಮತ್ತು ಮೂಲ ತತ್ವಗಳನ್ನು ಅರಿತುಕೊಳ್ಳುವ ಪ್ರಯತ್ನಕ್ಕೆ ಎಲ್ಲರೂ ಕೈ ಜೋಡಿಸೋಣ ಎಂದು ತಶೀಲ್ದಾರ್ ಕೆ. ರಾಘವೇಂದ್ರ ರಾವ್ ಅವರು ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಕುರುಗೋಡು, ಸಮಾಜ ಕಲ್ಯಾಣ ಇಲಾಖೆ ಬಳ್ಳಾರಿ ರವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆಯ ವಾಚನ ಕಾರ್ಯಕ್ರಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ  ಪುಷ್ಪಾರ್ಚನೆ ಸಲ್ಲಿಸಿ ಪೂಜೆ ಮಾಡುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಿ, ಸಂವಿಧಾನ ಪೀಠಿಕೆ ಓದಿ ಪ್ರತಿಜ್ಞಾವಿಧಿ ಭೋದಿಸಿದರು.
ಭಾರತದ ಪ್ರಜೆಗಳಾದ ನಾವು, ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮತೆಯನ್ನು ದೊರೆಯುವಂತೆ ಮಾಡುವುದಕ್ಕಾಗಿ ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲಿ ಭಾತೃತ್ವ  ಭಾವನೆಯನ್ನು ಮೂಡಿಸುವುದಕ್ಕೆ  ದೃಢಸಂಕಲ್ಪ ಮಾಡಿ, ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿಯ ನವೆಂಬರ್ ತಿಂಗಳ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು, ಅಂಗೀಕರಿಸಿ , ಶಾಸನವಾಗಿ ವಿಧಿಸಿಕೊಂಡಿದ್ದೇವೆ. ಎಂದು ಭೋದಿಸಿದರು.
ಈ ವೇಳೆ ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ, ತಾ.ಪಂ ಇ.ಒ ನಿರ್ಮಲ, ಕಚೇರಿ ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಗುಂಡಪ್ಪನವರ ನಾಗರಾಜ, ಶಾಲಾ ಮುಖ್ಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.