ಕುವೆಂಪು ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿಶ್ವಮಾನವರಾಗಲು ಸಾಧ್ಯ: ಕೆ.ಎಸ್ ಬಸವಂತಪ್ಪ

ಸಂಜೆವಾಣಿ ವಾರ್ತೆ
ದಾವಣಗೆರೆ, ಡಿ. ೩೦;: ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ರಾಷ್ಟ್ರಕವಿ ಕುವೆಂಪುರವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿಶ್ವಮಾನವರಾಗಲು ಸಾಧ್ಯ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್ ಬಸವಂತಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜರುಗಿದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರಕವಿ ಕುವೆಂಪುರವರ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಜನರು ವೈಚಾರಿಕವಾಗಿ ಯೋಚಿಸದೆ ಮೌಡ್ಯತೆಕಡೆಗೆ ವಾಲುತ್ತಿದ್ದಾರೆ. ನಮ್ಮ ದೇಶದಲ್ಲಿ ದೇವಸ್ಥಾನ, ಮಸೀದಿ, ಚರ್ಚ್‍ಗಳನ್ನು ವೈಭವೀಕರಿಸದೆ ಶಾಲಾ-ಕಾಲೇಜು ಹಾಗೂ ಆಸ್ಪತ್ರೆಗಳನ್ನು ವೈಭವಿಕರಿಸಿದಾಗ ಮಾತ್ರ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ. ಕುವೆಂಪುರವರನ್ನು ಕೇವಲ ದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ ಅವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.