ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ

ನವದೆಹಲಿ, ಮೇ.೭- ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ರೈತರು ಭಾರೀ ಬೆಂಬಲ ವ್ಯಕ್ತಪಡಿಸಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.
ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಇಂದು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ.ಬೆಳಗ್ಗೆ ೧೧ ಗಂಟೆಯಿಂದ ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್‌ನ ನರೇಶ್ ಟಿಕಾಯತ್ ಕೂಡ ಪಾಲ್ಗೊಳ್ಳಲಿದ್ದಾರೆ.ಹಾಗಾಗಿ ಜಂತರ್ ಮಂತರ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆರ್ ಎಎಫ್, ಸಿಆರ್ ಪಿಎಫ್ ಮತ್ತು ದೆಹಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಇದರೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಇದರೊಂದಿಗೆ ದೆಹಲಿಯ ಗಡಿ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ಮತ್ತು ಗಸ್ತು ಕೂಡ ಹೆಚ್ಚಿಸಲಾಗಿದೆ.ದೆಹಲಿ ಪೊಲೀಸರ ಪ್ರಕಾರ, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸಂಪೂರ್ಣ ಸಿದ್ಧತೆಗಳನ್ನು ಮಾಡಲಾಗಿದೆ. ಈ ರೀತಿ ಮಾಡುವವರನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರನ್ನೂ ನಿಯೋಜಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದ ಯುನೈಟೆಡ್ ಕಿಸಾನ್ ಮೋರ್ಚಾಕ್ಕೆ ಸೇರಿದ ಸಾವಿರಾರು ರೈತ ಮುಖಂಡರು ಜಂತರ್ ಮಂತರ್ ತಲುಪಿ ಕುಸ್ತಿಪಟುಗಳಿಗೆ ತಮ್ಮ ಬೆಂಬಲವನ್ನು ನೀಡಲಿದ್ದಾರೆ. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.