ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ

ವಿಜಯಪುರ, ಜು.೧೮: ನವಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ರಾಜ್ಯಸರ್ಕಾರವು ಹಲವು ವಿನೂತನ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಎಸ್.ಎಸ್.ಘಾಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಜೂಗಾನಹಳ್ಳಿ ಗ್ರಾಮದಲ್ಲಿ ಇಂದು ನಡೆದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ”ದ ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
“ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆಗೆ” ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಯಶಸ್ವಿಯಾಗಿದೆ. ಆರೋಗ್ಯ ಕಾರ್ಡ್ ವಿತರಣೆಯ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಶ್ರಮಿಸುತ್ತಿವೆ ಎಂದರು.
ಎಲ್ಲಾ ಇಲಾಖೆ ಕಾರ್ಯಕ್ರಮಗಳನ್ನು ಜನರ ಮನೆಬಾಗಿಲಿಗೆ ಕರೆತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಎಲ್ಲಾ ಇಲಾಖೆಗಳಿಗೆ ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದೆ. ಅದರಂತೆ ಅಧಿಕಾರಿಗಳು ಮಾತೃ ಹೃದಯದಿಂದ ಕೆಲಸ ಮಾಡಬೇಕು. ಸರ್ಕಾರಿ ಸೌಲಭ್ಯಗಳನ್ನು ವ್ಯವಸ್ಥಿತವಾಗಿ, ಕ್ರಮಬದ್ದವಾಗಿ ಒದಗಿಸಲು ಕ್ರಮ ವಹಿಸಬೇಕು. ನ್ಯಾಯ ದೊರಕಿಸಿಕೊಡುವುದು ತಡವಾದರೆ, ನ್ಯಾಯವೇ ಸತ್ತಂತೆ. ಹಾಗೆಯೇ ಸರ್ಕಾರಿ ಸವಲತ್ತುಗಳನ್ನು ನಿಗದಿತ ಅವಧಿಯಲ್ಲಿ ತಲುಪಿಸದಿದ್ದರೆ ವ್ಯರ್ಥವಾದಂತೆ ಎಂದರು.
ಜಿಲ್ಲೆಯ ಗಡಿಯಲ್ಲಿನ ಹಿಂದುಳಿದ ಹಳ್ಳಿಗಳನ್ನು ಆಯ್ಕೆ ಮಾಡಿ ಈ ಕಾರ್ಯಕ್ರಮ ಆಯೋಜಿಸುವುದು ಸೂಕ್ತ. ಈ ಹಿನ್ನೆಲೆಯಲ್ಲಿ ಮೇಲಿನಜೂಗಾನಹಳ್ಳಿಯಲ್ಲಿ ಕಾರ್ಯಕ್ರಮ ಮಾಡುವ ಮೂಲಕ ಹಿಂದುಳಿದ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಸರ್ಕಾರಿ ಕಚೇರಿಗಳಿಗೆ ರೈತರ, ಬಡವರ, ಸಾರ್ವಜನಿಕರ ಅಲೆದಾಟ ತಪ್ಪಿಸಲು “ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ” ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದ್ದು ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವುದರಿಂದ, ಕಂದಾಯ ಸೇರಿದಂತೆ ವಿವಿಧ ಇಲಾಖೆಯ ಸೌಲಭ್ಯಗಳನ್ನು ಒಂದೇ ಸೂರಿನಡಿ ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪ್ರಸ್ತುತ ಸರ್ಕಾರವು ಜನರ ಸವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.
ಬಡವರಿಗೆ, ನಿರ್ಗತಿಕರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಒಟ್ಟಾರೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಜಿಲ್ಲೆಗೆ ಆಗಮಿಸಿದ ಬಳಿಕ ಇದು ನನ್ನ ಮೊದಲ ಗ್ರಾಮ ವಾಸ್ತವ್ಯವಾಗಿದೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ಯಶಸ್ವಿಯಾಗಿದ್ದವು. ಅಂದಿನ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಸಾಕಷ್ಟು ಉತ್ತಮ ಕೆಲಸಗಳಾದವು. ಪ್ರಸ್ತುತ ಗ್ರಾಮಾಂತರ ಜಿಲ್ಲೆಗೆ ಅವರೇ ಉಸ್ತುವಾರಿಯಾಗಿದ್ದು ಮತ್ತಷ್ಟು ಉತ್ತಮ ಕೆಲಸಗಳು ನಡೆಯಲಿವೆ ಎಂದರು.
ಸರ್ಕಾರವು ಗ್ರಾಮವೊಂದನ್ನು ಆಯ್ಕೆ ಮಾಡಿ ಈ ಕಾರ್ಯಕ್ರಮ ರೂಪಿಸಿಲು ಆದೇಶಿಸಿತ್ತು. ಆದರೆ ಇದರಲ್ಲಿ ಸ್ವಲ್ಪ ಬದಲಾವಣೆ ಮಾಡಿ ಗ್ರಾಮ ಪಂಚಾಯಿತಿವಾರು ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಇದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ, ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ಸವಲತ್ತು ತಲುಪಿಸಲು ಸಾಧ್ಯವಾಗಿದೆ ಎಂದರಲ್ಲದೆ ಜಿಲ್ಲಾಮಟ್ಟದ ಅಧಿಕಾರಿಗಳು ಸಾಮಾನ್ಯವಾಗಿ ಕೇಂದ್ರ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಸ್ಥಳೀಯ ಸಮಸ್ಯೆಗಳ ಪರಿಚಯವಿರುವುದಿಲ್ಲ. ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಗಳ ಪ್ರತ್ಯಕ್ಷ ದರ್ಶನವಾಗುತ್ತದೆ. ಇದರಿಂದ ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಮತ್ತಷ್ಟು ಯೋಜನಾಬದ್ಧವಾಗಿ ಆಯೋಜಿಸಿ ಜನರ ದನಿಯಾಗುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು.
ಇಂದು ತೂಬಗೆರೆ ಹೋಬಳಿಯ ವಿವಿಧ ಹಳ್ಳಿಗಳ ೫೩೦೦ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸೌಲಭ್ಯ ಒದಗಿಸಲಾಗುತ್ತಿದೆ ಎಂದರಲ್ಲದೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಸಮಸ್ಯೆ ಬಗೆಹರಿಸಲು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ವೇದಿಕೆ ಕಾರ್ಯಕ್ರಮದಲ್ಲಿ ಸಚಿವರು ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಿಸಿದರು.
ಮೇಲಿನಜೂಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾರತಿ ಬಾಯಿ, ಉಪಾಧ್ಯಕ್ಷರಾದ ವಾಸು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಪ್ಪಯ್ಯಣ್ಣ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಹಾಗು ಶ್ರೀನಾಥ್‌ಗೌಡ, ಡಿವೈಎಸ್ಪಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸುತ್ತಮುತ್ತಲಿನ ಗ್ರಾಮಸ್ಥರು, ಜಿಲ್ಲಾ, ತಾಲ್ಲೂಕು ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮಕ್ಕೂ ಭೇಟಿ ನೀಡುವ ಮುನ್ನ ಜಿಲ್ಲಾಧಿಕಾರಿ ಅವರು ಶ್ರೀ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜನಪ್ರತಿನಿಧಿಗಳು ಅಲಂಕೃತವಾದ ಎತ್ತಿನ ಬಂಡಿಯಲ್ಲಿ ಆಗಮಿಸಿದರು. ಗ್ರಾಮ ವಾಸ್ತವ್ಯದ ಅಂಗವಾಗಿ ಆಗಮಿಸಿದ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮತ್ತು ಜನಪ್ರತಿನಿಧಿಗಳನ್ನು ಮೇಲಿನಜೂಗಾನಹಳ್ಳಿ ಗ್ರಾಮದ ಗ್ರಾಮಸ್ಥರು ಪೂರ್ಣಕುಂಭದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯೊಂದಿಗೆ ಸಂಚರಿಸಿ, ವಾದ್ಯಗಳೊಂದಿಗೆ ವಿಜೃಂಭಣೆಯಿಂದ ಸ್ವಾಗತಿಸಿದರು. ಗಿಡ ನೆಟ್ಟು, ನೀರೆರೆದರು. ನಂತರ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದರು.
ತದನಂತರ ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಮಗ್ಗ ಮತ್ತು ಜವಳಿ, ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳ ಮಾಹಿತಿ ನೀಡಲು ತೆರೆಯಲಾದ ಮಳಿಗೆಗಳನ್ನು ಉದ್ಘಾಟಿಸಿ, ವಿವಿಧ ಇಲಾಖೆಗಳ ಸವಲತ್ತುಗಳ ಕುರಿತ ಮಾಹಿತಿಯನ್ನು ಅವಲೋಕಿಸಿದರು.
ವೇದಿಕೆ ಕಾರ್ಯಕ್ರಮದ ನಂತರ ಬಚ್ಚಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದರು. ಹಾಗೂ ರಾತ್ರಿ ವಾಸ್ತವ್ಯ ಹೂಡಿದರು.
ಮಳೆ ನಿಂತ ನಂತರ ಸಂಜೆ ಮೇಲಿನಜೂಗಾನಹಳ್ಳಿ ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿ, ಗ್ರಾಮಸ್ಥರ ಮನೆಗಳಿಗೆ ಭೇಟಿ ನೀಡಿ, ಅವರ ಅಹವಾಲುಗಳನ್ನು ಸ್ವೀಕರಿಸಿದರು.