ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಪಡಿಸಲು ಒತ್ತಾಯಿಸಿ ಹೆದ್ದಾರಿ ತಡೆ

ದಾವಣಗೆರೆ: ರೈತ ಬೆಳೆಯುವ ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ರೈತ ಐಕ್ಯತಾ ಹೋರಾಟ ಸಮಿತಿಯ ಕಾರ್ಯಕರ್ತರು ನಗರದಲ್ಲಿಂದು ಹೆದ್ದಾರಿ ತಡೆಯುವ ಮೂಲಕ ಪ್ರತಿಭಟನೆ ನಡೆಸಿದರು.
ನಗರದ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-೪ರಲ್ಲಿ ಜಮಾಯಿಸಿದ ರೈತ ಐಕ್ಯತಾ ಹೋರಾಟ ಸಮಿತಿಯ ಕಾಯಕರ್ತರು ರೈತ ವಿರೋಧಿಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಾ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್, ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ೧೮೫೦ ರೂ. ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ಸ್ಥಳೀಯ ಎಪಿಎಂಸಿ ಮಾರಕಟ್ಟೆಯಲ್ಲಿ ವರ್ತಕರು, ದಲ್ಲಾಲರು ೧೦೫೦ರಿಂದ ೧೨೦೦ ರೂ.ನಂತೆ ಮೆಕ್ಕೆಜೋಳ ಖರೀದಿಸುತ್ತಿದ್ದಾರೆ. ರೈತರ ಶಾಲು ಹಾಕಿಕೊಂಡು ನಾನು ರೈತರಪರವಾಗಿದ್ದೇನೆಂದು ಮೊಸಳೆ ಕಣ್ಣೀರು ಸುರಿಸುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವರ್ತಕರನ್ನು ನಿಯಂತ್ರಿಸುವ ಶಕ್ತಿ ಇಲ್ಲವೇ? ಎಂದು ಪ್ರಶ್ನಿಸಿದರು.
ಯಡಿಯೂರಪ್ಪರಿಗೆ ನಾಚಿಕೆ, ಮಾನ-ಮರ್ಯಾದೆ ಇದ್ದರೆ, ತಕ್ಷಣವೇ ರೈತರ ಶಾಲು ಧರಿಸುವುದನ್ನು ಬಿಡಬೇಕು ಎಂದು ಒತ್ತಾಯಿಸಿದ ಅವರು, ಯಡಿಯೂರಪ್ಪನವರು ಇನ್ನೂ ಮುಂದೆ ರೈತರ ಶಾಲು ಹಾಕಿಕೊಳ್ಳುವುದಾದರೆ, ಸರ್ಕಾರ ನಿಗದಿ ಮಾಡಿರುವ ದರಕ್ಕೆ ಕೃಷಿ ಉತ್ಪನ್ನಗಳು ಖರೀದಿ ಆಗುವಂತೆ ನೋಡಿಕೊಳ್ಳಬೇಕು. ಕ್ವಿಂಟಾಲ್ ಮೆಕ್ಕೆಜೋಳಕ್ಕೆ ೩೫೦೦ ರೂ. ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕೆಂಧೂ ಆಗ್ರಹಿಸಿದರು.
ಸದನದಲ್ಲಿ ಯಾವುದೇ ರೀತಿಯ ಚರ್ಚೆ ನಡೆಸದೆಯೇ ಭೂಸುಧಾರಣ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತ ಹಾಕಿಸುವ ಮೂಲಕ ಆ ತಿದ್ದುಪಡಿಗಳನ್ನು ಹಿಂಬಾಗಿಲ ಮೂಲಕ ಜಾರಿ ಮಾಡಲು ಮುಂದಾಗಿರುವ ಸರ್ಕಾರದ ಅಪ್ರಜಾತಾಂತ್ರಿಕ ನೀತಿಯನ್ನು ರೈತರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆದ್ದರಿಂದ ತಕ್ಷಣವೇ ರೈತರಿಗೆ ಮಾರಕವಾಗು ನಿಟ್ಟಿನಲ್ಲಿ ಕಾಯ್ದೆಗಳಿಗೆ ತಿದ್ದುಪಡಿತಂದಿರುವುದನ್ನು ತಕ್ಷಣವೇ ಕೈಬಿಡಬೇಕೆಂದು ಒತ್ತಾಯಿಸಿದರು.
ರೈತ ಮುಖಂಡರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಆದ ತೇಜಸ್ವಿ ಪಟೇಲ್ ಮಾತನಾಡಿ, ಸುಮಾರು ವರ್ಷಗಳಿಂದ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚದ ಆಧಾರದಲ್ಲಿ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಮಾಡಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ರೈತ ಸಂಘಟನೆಗಳು ಮನವಿ ಮಾಡುತ್ತಾ ಬಂದಿವೆ. ಆದರೂ, ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.
ಕೋವಿಡ್ ಸಂದರ್ಭದಲ್ಲಿ ರೈತರು ಮತ್ತು ಜನರು ಸೇರದಿದ್ದ ಕಾರಣಕ್ಕೆ ಸರ್ಕಾರಗಳು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದವು. ಯಾವು ಕಾಯ್ದೆಗೆ ಬೇಕಾದರೆ ತಿದ್ದುಪಡಿ ತನ್ನಿ ರಾಷ್ಟ್ರೀಯ, ಅಂತರಾಷ್ಟ್ರೀಯ ವರ್ತಕರಿಗೆ ಬೇಕಾದರೆ ಅವಕಾಶ ಮಾಡಿಕೊಡಿ. ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಕನಿಷ್ಠ ಬೆಂಬಲ ಬೆಲೆ ಕಾಯ್ದೆಗೆ ಮಾನ್ಯತೆ ನೀಡಿ, ವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕೆಂದು ಆಗ್ರಹಿಸಿದರು.
ಎಲ್ಲವನ್ನೂ ಸರ್ಕಾರ ಖಾಸಗೀಕರಣ ಮಾಡುತ್ತಿವೆ. ನಮಗೆ ಸಾರ್ವಜನಿಕ ಸಂಸ್ಥೆಗಳನ್ನು ನಡೆಸಲಾಗುವುದಿಲ್ಲ ಎಂಬ ಸರ್ಕಾರದ ವೈಫಲ್ಯದ ಕಾರಣಕ್ಕೆ ಈ ಖಾಸಗೀಕರಣ ಮಾಡಲಾಗುತ್ತಿದೆ. ನಿಮ್ಮ ಲೋಪ ಮುಚ್ಚಿಕೊಳ್ಳಲು ಸಾರ್ವಜನಿಕ ವಲಯವನ್ನು ಖಾಸಗೀಕರಣ ಮಾಡುವ ಬದಲು, ನಿಮಗೆ ಆ ಸಾಮರ್ಥ್ಯ ಇಲ್ಲದಿದ್ದರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಎಚ್.ಜಿ.ಆವರಗೆರೆ ಉಮೇಶ್, ನಿಟ್ಟುವಳ್ಳಿ ಅಂಜಿನಪ್ಪ, ಹೊನ್ನೂರು ಮುನಿಯಪ್ಪ, ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಐರಣಿ ಚಂದ್ರು, ಆವರಗೆರೆ ಹನುಮಂತಪ್ಪ, ನಾಗೇಂದ್ರಪ್ಪ, ಬಲ್ಲೂರು ರವಿಕುಮಾರ್, ಪಾಲವ್ವನಹಳ್ಳಿ ಪ್ರಸನ್ನಕುಮಾರ್ ಮತ್ತಿತರರು ಭಾಗವಹಿಸಿದ್ದರು.