ಕೃಷಿ ಕಾಯ್ದೆಗೆ ಅನ್ನದಾತರ ಆಕ್ರೋಶ

ನವದೆಹಲಿ/ಬೆಂಗಳೂರು, ಸೆ.೨೭- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತರೊಬ್ಬರು ಸಿಂಘು ಗಡಿಯಲ್ಲಿ ಮೃತಪಟ್ಟಿರುವುದು ರೈತರ ಆಕ್ರೋಶಕ್ಕೆ ಭುಗಿಲೇಳುವಂತಾಗಿದೆ.
ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್‌ಗೆ ಕರೆ ನೀಡಿತ್ತು.
ಈ ವೇಳೆ ಹರಿಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವನ್ನಪ್ಪಿದ್ದಾರೆ. ಆದರೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಯಿಂದ ಮಾತ್ರ ರೈತನ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ.
ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಕಾಂಗ್ರೆಸ್ ಎಡಪಕ್ಷಗಳು, ಟಿಡಿಪಿ ಸೇರಿದಂತೆ ಇತರ ಪಕ್ಷಗಳು ಬಂದ್‌ಗೆ ಬೆಂಬಲ ಸೂಚಿಸಿ, ರಾಜಧಾನಿಯಲ್ಲಿ ಭಾರಿ ಪ್ರತಿಭಟನೆ ನಡೆಸಿ, ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು. ಹಲವೆಡೆ ಪ್ರತಿಭಟನಾನಿರತ ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯಿಂದಾಗಿ ದೆಹಲಿ, ಹರಿಯಾಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ರೈತರು ಕೃಷಿ ಕಾಯ್ದೆ ವಿರೋಧಿಸಿ ಭಾರಿ ಪ್ರತಿಭಟನೆ, ರೈಲು ತಡೆ ನಡೆಸಿದ್ದರಿಂದ ಉತ್ತರ ಭಾರತದಲ್ಲಿ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ರಾಜ್ಯದ ಹಲವೆಡೆ ರಸ್ತೆ ತಡೆ ಪ್ರತಿಭಟನೆ ಟೈರ್ ಗಳಿಗೆ ಬೆಂಕಿ ಹಚ್ಚಿ ರೈತ ಜನಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ರಾಜ್ಯದ ಹಲವೆಡೆ ರಸ್ತೆ ತಡೆ ಪ್ರತಿಭಟನೆ ಟೈರ್‌ಗಳಿಗೆ ಬೆಂಕಿ ಹಚ್ಚಿ ರೈತ ಜನಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಕನ್ನಡಪರ ಸಂಘಟನೆಗಳ ಮುಖಂಡರಾದ ಸಾ.ರಾ. ಗೋವಿಂದು ಸೇರಿದಂತೆ, ಇತರ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಖಾಸಗಿ ಸಂಸ್ಥೆಗಳ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದು ಬ್ಯಾಂಕ್ ವಹಿವಾಟಿನಲ್ಲಿ ಕೂಡ ಯಾವುದೇ ರೀತಿಯ ವ್ಯತ್ಯಯ ಕಂಡು ಬಂದಿಲ್ಲ. ಜನ ಜೀವನ ಎಂದಿನಂತಿದ್ದು ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಬೆಳಗ್ಗೆಯೇ ರಸ್ತೆಗಿಳಿದಿರುವ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ್ ಬಂದ್ ಬೆಂಬಲಿಸಿ ನಗರದಲ್ಲಿ ಪ್ರತಿಭಟನೆ ನಡೆಸಲು ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೆಜೆಸ್ಟಿಕ್ ಹಾಗೂ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ್ದ ಗುಂಪು ಪ್ರತಿಭಟನೆ ಆರಂಭಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸ್ಥಳದಲ್ಲಿದ್ದ ಪೊಲೀಸರು, ಪ್ರತಿಭಟನೆಗೆ ಅನುಮತಿ ಪಡೆದಿಲ್ಲ. ಹೀಗಾಗಿ, ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಕಾನೂನು ಮೀರಿ ನಡೆದುಕೊಳ್ಳಬೇಡಿ ಎಂದು ಮನವಿ ಮಾಡಿದರಾದರೂ ಜಗ್ಗದ ಪ್ರತಿಭಟನಕಾರರು, ಪ್ರತಿಭಟನೆ ಮುಂದುವರೆಸಲಾಗುವುದು ಎಂದು ಪಟ್ಟು ಹಿಡಿದಾಗ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ತಳ್ಳಾಟ ನೂಕಾಟ:
ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಎಲ್ಲರನ್ನೂ ಬಸ್ಸಿನಲ್ಲಿ ಕರೆದೊಯ್ದರು. ವಶಕ್ಕೆ ಪಡೆಯುತ್ತಿದ್ದ ವೇಳೆಯಲ್ಲೂ ತಳ್ಳಾಟ, ನೂಕಾಟ ನಡೆಯಿತು.
ಬಂದ್ ನಡುವೆಯೂ ಬೆಂಗಳೂರಿನಲ್ಲಿ ಯಥಾಸ್ಥಿತಿ ಇದೆ. ಬೆಳಿಗ್ಗೆಯಿಂದ ವಾಣಿಜ್ಯ ವಹಿವಾಟು ಮಾಮೂಲಿನಂತಿದೆ.
ದಾವಣಗೆರೆಯಲ್ಲಿ ಜಯದೇವ ಸರ್ಕಲ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘದ ಸದಸ್ಯರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘ ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದ ಬಣದ ಕಾರ್ಯಕರ್ತರು ರಸ್ತೆಗೆ ತರಕಾರಿ ಸುರಿದು ಪ್ರತಿಭಟನೆ ನಡೆಸಿದರು. ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ಕಿಡಿಕಾರಿದರು. ಬಂದ್ ಹಿನ್ನೆಲೆ ಬಸ್ ನಿಲ್ದಾಣಕ್ಕೆ ಆಗಮಿಸಿದ ರೈತ ಹಾಗೂ ಕಾರ್ಮಿಕ ಸಂಘಟನೆಗಳು, ಪ್ರಯಾಣಿಕರು ಬಂದ್‌ಗೆ ಬೆಂಬಲಿಸುವಂತೆ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಮನವಿ ಮಾಡಿದರು.
ಧಾರವಾಡದಲ್ಲಿ ರೈತನೊಬ್ಬ ಬಸ್‌ಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದರು. ಎಂದಿನಂತೆ ಸಂಚಾರ ಆರಂಭಿಸಿರುವ ಬಸ್ ಸೇವೆ ಬಂದ್ ಮಾಡುವಂತೆ ಒತ್ತಾಯಿಸಿದರು. ಧಾರವಾಡ ಜ್ಯುಬಿಲಿ ಸರ್ಕಲ್‌ನಲ್ಲಿ ಬಸ್ ತಡೆದ ಬಸ್ ರೈತ ಮುಖಂಡ ನಿಂಗಪ್ಪ ಲಿಗಾಡೆ, ಬೇಕಾದರೆ ನಮ್ಮ ಮೇಲೆ ಹಾಯಿಸಿಕೊಂಡು ಹೋಗಿ. ಆದರೆ, ಬಸ್ ಆರಂಭ ಮಾಡದೆ, ರೈತರಿಗೆ ಬೆಂಬಲ ನೀಡಿ ಎಂದು ಮನವಿ ಮಾಡಿಕೊಂಡರು. ಧಾರವಾಡದ ಜ್ಯುಬಿಲಿ ಸರ್ಕಲ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ಚಾಮರಾಜನಗರ, ಬೆಳಗಾವಿ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ-ಹುಬ್ಬಳ್ಳಿ, ಯಾದಗಿರಿ, ರಾಯಚೂರು ಸೇರಿದಂತೆ ರಾಜ್ಯದ ಹಲವೆಡೆ ರೈತರು ಮತ್ತು ಕನ್ನಡಪರ ಸಂಘಟನೆ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಹಲವೆಡೆ ಬಲವಂತ ಬಂದ್ ಮಾಡಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಡಿಹಳ್ಳಿ ನೇತೃತ್ವದಲ್ಲಿ ಪ್ರತಿಭಟನೆ

ಇದೇ ವೇಳೆ ಹಸಿರು ಸೇನೆ ಮತ್ತು ರಾಜ್ಯ ರೈತ ಸಂಘಟನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕೆಆರ್ ಪುರದಿಂದ ಪುರಭವನದವರೆಗೆ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗೋಣಿಚೀಲ ಧರಿಸಿ, ವಿಭಿನ್ಯ ರೀತಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಹಿತಾಸಕ್ತಿಗೆ ಮಾರಕವಾಗಿರುವ ಕೃಷಿಕಾಯ್ದೆಗಳನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಕನ್ನಡ ಪರಸಂಘಟನೆಗಳ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಸೇರಿದಂತೆ ಇತರ ಮುಖಂಡರು ಭಾಗವಹಿಸಿದ್ದರು.
ಪ್ರತಿಭಟನೆಯಿಂದಾಘಿ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ತುರ್ತಾಗಿ ತೆರಳಬೇಕಾಗಿದ್ದ ವಾಹನಗಳ ಮಧ್ಯೆ ಸಿಕ್ಕಿ ಹಾಕಿಕೊಂಡಿತ್ತು. ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿ ಆಂಬುಲೆನ್ಸ್ ತೆರಳಲು ಅನುವು ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಕೃಷಿಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ರೈತರನ್ನು ಕೂಲಿ ಕಾರ್ಮಿಕರನ್ನಾಗಿ ಮತ್ತು ಬೀದಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕೃಷಿ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರುತ್ತಿದೆ. ಈ ಮೂಲಕ ೮೫ ಕೋಟಿ ಜನರ ಉದ್ಯೋಗವನ್ನು ಕಸಿಯಲು ಮುಂದಾಗಿದ್ದು ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಕಳವಳ ವ್ಯಕ್ತಪಡಿಸಿದರು.