ಕೃಷಿ ಕಾಲೇಜು ಮಂಜೂರಾತಿಗೆ ಆಗ್ರಹ

ಬೀದರ್:ಜು.11: ರಾಜ್ಯ ಸರ್ಕಾರ ಜಿಲ್ಲೆಗೆ ಕೃಷಿ ಕಾಲೇಜು ಮಂಜೂರು ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ ಒತ್ತಾಯಿಸಿದ್ದಾರೆ.

ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ, ಅರಣ್ಯ, ಪರಿಸರ, ಜೈವಿಕ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್ ಹಾಗೂ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರಿಗೆ ಈ ಕುರಿತು ಅವರು ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಬೀದರ್ ಜಿಲ್ಲೆಯಲ್ಲಿ ಮಾತ್ರ ಕೃಷಿ ಕಾಲೇಜು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ 2012 ರಿಂದ ಕೃಷಿ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿತ್ತು. ಇದರಿಂದ ಕೃಷಿಕರ ಮಕ್ಕಳಿಗೆ ಕೃಷಿ ಅಧ್ಯಯನಕ್ಕೆ ಅನುಕೂಲವಾಗಿತ್ತು.

ಆದರೆ, ಇದೀಗ ಸರ್ಕಾರ ಅದನ್ನೂ ಮುಚ್ಚಲು ಸೂಚಿಸಿರುವ ಕಾರಣ ಜಿಲ್ಲೆಯ ವಿದ್ಯಾರ್ಥಿಗಳು ಕೃಷಿ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಗೆ ಕೃಷಿ ಕಾಲೇಜು ಮಂಜೂರು ಮಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತರಗತಿ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.