ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಪ್ರಕರಣ

ಕಲಬುರ್ಗಿ:ಡಿ.23: ಅವಿರೋಧವಾಗಿ ಎಲ್ಲ ಸದಸ್ಯರು ಆಯ್ಕೆಯಾದ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯಿಂದ ₹ 1 ಕೋಟಿ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದ ಆರೋಪದ ಮೇರೆಗೆ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಇಲ್ಲಿನ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ) ನೋಡಲ್ ಅಧಿಕಾರಿಯಾದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸೂಚನೆ ಮೇರೆಗೆ ಕಲಬುರ್ಗಿ ತಹಶೀಲ್ದಾರ್ ಸಂಗಯ್ಯ ಸ್ವಾಮಿ ಅವರು ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೂ ಮುನ್ನ ಜಿ.ಪಂ. ಸಿಇಓ ಅವರು ಡಿ 15ರಂದು ನೋಟಿಸ್‌ ಜಾರಿಗೊಳಿಸಿದ್ದರು. ಅದಕ್ಕೆ ಲಿಖಿತ ಉತ್ತರ ನೀಡಿದ್ದ ದತ್ತಾತ್ರೇಯ ಪಾಟೀಲ ಅಂತಹ ಘೋಷಣೆ ಮಾಡಿಲ್ಲ ಎಂದು ಲಿಖಿತ ಹೇಳಿಕೆ ನೀಡಿದ್ದರು. ಪತ್ರಿಕಾ ವರದಿಗಳನ್ನು ಪರಿಶೀಲನೆ ನಡೆಸಿದಾಗ ಅಧ್ಯಕ್ಷರು ಅಂತಹ ಘೋಷಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹಾಗಾಗಿ, ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್‌ಗೆ ಸೂಚನೆ ನೀಡಿದ್ದಾರೆ.

ಅನುದಾನ ಘೋಷಣೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಆದ್ದರಿಂದ ಮಂಡಳಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.