ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ ಸ್ಥಾಪನೆ: ಡಿಸಿಎಂ

ಬೆಂಗಳೂರು, ಏ. 25- ಕೆಸಿ ಜನರಲ್ ಆಸ್ಪತ್ರೆಯಲ್ಲಿ ಹೆಚ್ಚು ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಅತ್ಯುತ್ತಮ ಸೌಲಭ್ಯಗಳು ಕೂಡ ಇವೆ. ಹೀಗಾಗಿ ಇಲ್ಲಿಯೇ ಇನ್ನೊಂದು ದೊಡ್ಡ ಪ್ರಮಾಣದ ಹೊರ ರೋಗಿಗಳ ವಿಭಾಗವನ್ನು ತೆರೆಯಲು ಸರಕಾರ ನಿರ್ಧರಿಸಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇದೆ. ಅದನ್ನು ಇಲ್ಲ ಎಂದು ಹೇಳುತ್ತಿಲ್ಲ. ಆದರೆ, ಆ ಸಮಸ್ಯೆಯನ್ನು ಬಗೆಹರಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುತ್ತಿದೆ. ಒಂದು ವೇಳೆ ಬೆಡ್‌ ಸಿಗದಿದ್ದರೂ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಯಾರೇ ಬಂದರೂ ಅವರನ್ನು ತಪಾಸಣೆ ಮಾಡಿ ಉತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವೆ ಎಂದರು.
ಈ ಆಸ್ಪತ್ರೆಯಲ್ಲಿ 450 ಬೆಡ್‌ ಇದೆ. ಸಾಕಾಗುತ್ತಿಲ್ಲ ನಿಜ, ಆದರೆ ದಿನಕ್ಕೆ ಕೊನೆಪಕ್ಷ 2,000 ಜನರಿಗೆ ಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಅದಕ್ಕೆ ಅಗತ್ಯವಾದ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪ್ರಶ್ನರಯೊಂದಕ್ಕೆ ಉತ್ತರಿಸಿದರು.

ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಖಾ ಎಂಬ ನರ್ಸ್‌ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ʼಮನ್‌ ಕೀ ಬಾತ್‌ʼ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಅತ್ಯಂತ ಸಂತೋಷದ ಸಂಗತಿ ಎಂದು ಹೇಳಿದರು.