ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ : ಅಪ್ಪಾಸಾಹೇಬ ಅವತಾಡೆ

ಕಾಗವಾಡ : ಫೆ.1:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಐದು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಕೂಡಾ ಬಿಜೆಪಿ ಪಕ್ಷ ಗೆಲ್ಲಲಿದೆ. ಕೇಂದ್ರದಲ್ಲಿ ಮತ್ತೋಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ಮುಖಂಡ ಅಪ್ಪಾಸಾಹೇಬ ಅವತಾಡೆ ಹೇಳಿದರು
ಅವರು ತಾಲೂಕಿನ ಕೆಂಪವಾಡ ಗ್ರಾಮದ ಅಥಣಿ ಶುಗರ್ಸ್ ಕಾರ್ಖಾನೆಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟಿಲ್ ಅವರ ಹುಟ್ಟು ಹಬ್ಬದ ಅಂಗವಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಮ ಮಂದಿರ ಲೋಕಾರ್ಪಣೆಯಿಂದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಜೋರಾಗಿದೆ ಈ ಅಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂಲೆಗುಂಪಾವುದು ಖಚಿತ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ದೇಶದ ಎಲ್ಲ ಜನರ ಮನಸ್ಸಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದು ಇದೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ ಎಂದರು.