
ಕಲಬುರಗಿ:ಅ. 12: ಜಿಲ್ಲೆಯ ಆಳಂದ್ ತಾಲ್ಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ಸಂಘ ಪರಿವಾರದ ಅಟ್ಟಹಾಸ ಮಿತಮೀರಿದ್ದು, ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ಜಾತಿವಾದ ಹಾಗೂ ಕೋಮುವಾದವನ್ನು ಹುಟ್ಟುಹಾಕಿರುವ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ್ ಅವರಿಗೆ ಕೂಡಲೇ ವಜಾಗೊಳಿಸಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿಯ ಸದಸ್ಯ ಕಾಂ. ವಿರಾಜ್ ದೇವಾಂಗ್ ಅವರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಪರಿವಾರದ ಚಟುವಟಿಕೆಗಳು ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋಮುವಾದವನ್ನು ಹುಟ್ಟುಹಾಕುತ್ತಿವೆ. ಅಂತಹ ಚಟುವಟಿಕೆಗಳನ್ನು ಸ್ವತ: ಕುಲಪತಿಗಳೇ ಪೋಷಿಸುತ್ತಿದ್ದಾರೆ. ವಿಶ್ವವಿದ್ಯಾಲಯದಲ್ಲಿನ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಜಾತಿವಾದ ಹಾಗೂ ದೌರ್ಜನ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಕೂಡಲೇ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲದೇ ಹೋದಲ್ಲಿ ಕೇಂದ್ರ ಸರ್ಕಾರವೇ ಅವರಿಗೆ ವಜಾಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಈ ಕುರಿತು ರಾಷ್ಟ್ರೀಯ ನಾಯಕರ ಗಮನಕ್ಕೆ ತರುವಂತಹ ಕೆಲಸವನ್ನು ಸಂಘಟನೆ ಮಾಡಲಿದೆ ಎಂದು ಅವರು ಹೇಳಿದರು.
ಇನ್ನು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗಳಿಂದಾಗಿ ಶಿಕ್ಷಣದ ಗುಣಮಟ್ಟ ಸಂಪೂರ್ಣ ಕುಸಿಯುತ್ತಿದೆ. ಶೇಕಡಾ 80ರಷ್ಟು ಹುದ್ದೆಗಳು ಖಾಲಿಯಾಗಿವೆ. ಕಳೆದ ಹತ್ತು ವರ್ಷಗಳಿಂದಲೂ ಅಧ್ಯಾಪಕರ ಹುದ್ದೆಗಳು ಭರ್ತಿಯಾಗದೇ ಇರುವುದರಿಂದ ವಿಶ್ವವಿದ್ಯಾಲಯವು ಶೈಕ್ಷಣಿಕವಾಗಿ ದಿವಾಳಿಯ ಅಂಚಿಗೆ ತಲುಪಿದೆ. ಕೂಡಲೇ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಮತ್ತು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಅರ್ಹತೆ ಆಧಾರದ ಮೇಲೆ ಖಾಯಂಗೊಳಿಸಬೇಕು ಎಂದುಅ ವರು ಆಗ್ರಹಿಸಿದರು.
ಕೇಂದ್ರ ಸರ್ಕಾರವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು, ಅದು ಕೇಸರೀಕರಣವನ್ನು ಬೆಂಬಲಿಸುತ್ತದೆ. ಜಾತಿವಾದ ಹಾಗೂ ಕೋಮುವಾದಗಳಿಗೆ ಕುಮ್ಮಕ್ಕು ಕೊಡುತ್ತದೆ. ಹಾಗಾಗಿ ಕರ್ನಾಟಕ ಸರ್ಕಾರವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರದೇ ಪ್ರತ್ಯೇಕ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ಈ ಸಂಬಂಧ ಪ್ರೊ. ಸುಖದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಶಿಕ್ಷಣ ನೀತಿಯ ಆಯೋಗವನ್ನು ರಚಿಸಿದ್ದು ಸಮರ್ಥನೀಯವಾಗಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಅನಿಲಕುಮಾರ್ ಕಾಂಬಳೆ, ಗುಂಡಪ್ಪ ಹೊಸಮನಿ, ಮಲ್ಲಪ್ಪ ದೊಡ್ಡಮನಿ, ಮಲಕಪ್ಪ ಯಾಳವ್, ಭೀಮಾಶಂಕರ್ ಮಾಡಿಯಾಳ್ ಮುಂತಾದವರು ಉಪಸ್ಥಿತರಿದ್ದರು.