
ನವದೆಹಲಿ,ಏ.16- ಅಬಕಾರಿ ನೀತಿ ಪರಿಷ್ಕರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವುದನ್ನು ವಿರೋಧಿಸಿ ಎಎಪಿ ನಾಯಕರು ಸಿಬಿಐ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಪಂಬಾಜ್ ಮುಖ್ಯಮಂತ್ರಿ ಭಗವಂತ್ ಮಾನ್ ರಾಜ್ಯ ಸಭಾ ಸದಸ್ಯರಾದ ರಾಘವ್ ಚಡ್ಡಾ, ಸಂಜಯ್ ಸಿಂಗ್ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಸೇರಿದಂತೆ ಎಎಪಿ ನಾಯಕರು ಸಿಬಿಐ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ದೇಶದಲ್ಲಿ ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಸೇರಿದಂತೆ ಮತ್ತಿತರ ಸಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಬಿಜೆಪಿಯ ನಾಯಕರ ಈ ರೀತಿಯ ನಡೆಗೆ ದೇಶದ ಜನತೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿಬಿಐ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ಬಳಿಕ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೇ ನೀಡಿದ್ದಾರೆ.
ಸದ್ಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸದ್ಯ ದೆಹಲಿಯ ಜೈಲಿನಲ್ಲಿದ್ದಾರೆ.