ಕೈನಲ್ಲಿ ಆಂತರಿಕ ಸಮಸ್ಯೆಯಿಲ್ಲ: ಎಚ್‌ಕೆಪಿ

ಬೆಂಗಳೂರು, ನ. ೪- ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಮುಖ್ಯಮಂತ್ರಿ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆ ಮಾಧ್ಯಮಗಳ ಸೃಷ್ಟಿ ಎಂದು ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ಕೊಪ್ಪಳದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಸಿದ್ಧರಾಮಯ್ಯ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ಯಾರೇ ಆಗಲಿ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದು ಸರಿಯಲ್ಲ ಎಂದರು.
ನೀವು ಸಿಎಂ ಸ್ಥಾನದ ಆಕಾಂಕ್ಷಿನಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಬಯಸಿದರೆ ಸಿಎಂ ಆಗುವುದಿಲ್ಲ. ಅದನ್ನು ಕೇಂದ್ರದ ನಾಯಕರು ನಿರ್ಧಾರ ಮಾಡುವರು. ಮುಖ್ಯಮಂತ್ರಿ ಹುದ್ದೆಯ ಆಸೆ ಇಟ್ಟುಕೊಳ್ಳುವುದು ತಪ್ಪಲ್ಲ. ಅದಕ್ಕೆ ಜನರ ಆಶೀರ್ವಾದವೂ ಬೇಕು ಎಂದರು.
ಆಹ್ವಾನ ಬಂದಿಲ್ಲ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಿರುವ ಸಚಿವರ ಸಭೆಗೆ ನನಗೆ ಆಹ್ವಾನ ಬಂದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳ ಸಭೆಗೆ ನನಗೆ ಆಹ್ವಾನ ಬಂದಿಲ್ಲ. ನನಗೆ ಆರೋಗ್ಯವೂ ಸರಿ ಇಲ್ಲ ಎಂದು ಹೇಳಿದ ಅವರು, ಅವಕಾಶ ಕೊಟ್ಟರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧ ಎಂಬ ಪ್ರಿಯಾಂಕ ಖರ್ಗೆ ಅವರ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದರು
ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ರಾಜ್ಯದ ಅಭಿವೃದ್ಧಿಯೇ ನಮ್ಮ ಪಕ್ಷದ ಧ್ಯೇಯ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಐದು ವರ್ಷ ಮುಂದುವರೆಯಲಿದ್ದಾರೆಯೇ ಎಂಬ ಪ್ರಶ್ನೆಗೆ, ಸಚಿವ ಶರಣ್ ಪ್ರಕಾಶ್ ಪಾಟೀಲ್ ಪ್ರಕಾಶ್ ಪ್ರತಿಕ್ರಿಯಿಸಲು ನಿರಾಕರಿಸಿದರು.