ಕೈ ಪ್ರತಿಭಟನೆ ರಾಹುಲ್ ಬಂಧನ

ನ್ಯಾಷನಲ್ ಹೆರಾಲ್ಡ್ ಪ್ರಕರಣ

ನವದೆಹಲಿ,ಜು.೨೬- ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಇಂದು ೨ನೇ ಬಾರಿಗೆ ಜಾರಿನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.ಇದೇ ವೇಳೆ ಸೋನಿಯಾಗಾಂಧಿ ವಿಚಾರಣೆ ಖಂಡಿಸಿ ಪ್ರತಿಭಟನೆ ನಡೆಸಿದ ರಾಹುಲ್‌ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕಳೆದವಾರ ಎರಡು ತಾಸುಗಳ ಕಾಲ ಸೋನಿಯಾ ಅವರನ್ನು ವಿಚಾರಣೆಗೆ ಗುರಿಪಡಿಸಿ ಪ್ರಕರಣ ಸಂಬಂಧ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದರು. ಅವರ ಆರೋಗ್ಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಿದ್ದಾರೆ.ಇಂದು ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಪುತ್ರಿ ಪ್ರಿಯಾಂಕಗಾಂಧಿ ವಾಧ್ರಾ ಅವರೊಂದಿಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತಂತೆ ಸೋನಿಯಾ ಅವರಿಗೆ ಇಡಿ ಅಧಿಕಾರಿಗಳು ಸರಣಿ ಪ್ರಶ್ನೆಗಳನ್ನು ಕೇಳಿ ಅವರಿಂದ ಇಂದೂ ಕೂಡ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸೋನಿಯಾ ಅವರನ್ನು ಇಡಿ ವಿಚಾರಣೆಗೆ ಗುರಿಪಡಿಸಿರುವುದಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು, ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಸಂಸದರು, ಶಾಸಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರದ ಕ್ರಮಕ್ಕೆ ಕಿಡಿ ಕಾರಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಸಂಸದರು ಶಾಂತಿಯುತ ಪ್ರತಿಭಟನೆ ನಡೆಸಿದರು. ದೆಹಲಿ ಪೊಲೀಸರು ಗಾಂಧೀಜಿ ಸ್ಮಾರಕವಿರುವ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲು ಅನುಮತಿ ನೀಡಬೇಕೆಂಬ ಬೇಡಿಕೆಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದ್ದರಿಂದ ಕಾಂಗ್ರೆಸ್ ಸಂಸದರು ಮೌನ ಪ್ರತಿಭಟನೆ ನಡೆಸಿದರು.
ಸೋನಿಯಾಗಾಂಧಿ ಅವರನ್ನು ವಿಚಾರಣೆಗೆ ಗುರಿಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ಸಂಸತ್ ಭವನದಲ್ಲಿ ವಿಜಯ್‌ಚೌಕ್ ಮಾರ್ಗವಾಗಿ ರಾಷ್ಟ್ರಪತಿ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿತು. ಸಂಸದರು ರಾಷ್ಟ್ರಪತಿ ಭವನದತ್ತ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದಲ್ಲೇ ಪೊಲೀಸರು ತಡೆದರು. ಈ ವೇಳೆ ಪೊಲೀಸರ ಜತೆ ವಾಗ್ವಾದ ನಡೆಯಿತು. ಬಳಿಕ ರಾಹುಲ್‌ಗಾಂಧಿ ಸೇರಿದಂತೆ ಇತರ ಕಾಂಗ್ರೆಸ್ ಸಂಸದರನ್ನು ಪೊಲೀಸರು ವಶಕ್ಕೆಪಡೆದರು. ಈ ವೇಳೆ ಪ್ರತಿಕ್ರಿಯೆ ನೀಡಿದ ದೇಶದಲ್ಲಿ ಹಣ ದುಬ್ಬರ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದು, ಈ ಬಗ್ಗೆ ಪ್ರತಿಭಟನೆ ನಡೆಸಲು ಪೊಲೀಸರು ಅವಕಾಶ ನೀಡುತ್ತಿಲ್ಲ. ಸಂಸತ್‌ನಲ್ಲೂ ಚರ್ಚೆಗೆ ಅವಕಾಶ ನೀಡದೆ ಬಂಧಿಸಲಾಗಿದೆ ಎಂದು ಕಿಡಿಕಾರಿದರು.ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ, ಪ್ರತಿಪಕ್ಷಗಳ ದನಿಯನ್ನು ಅಡಗಿಸಲು ಪಿತೂರಿ ನಡೆಸಿದ್ದಾರೆ. ಆದರೆ, ನಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.ಮತ್ತೊಂದೆಡೆ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮುಂಬೈ, ಮಹಾರಾಷ್ಟ್ರ, ಕೊಲ್ಕತ್ತ, ಚೆನ್ನೈ ಹಾಗೂ ಕರ್ನಾಟಕ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ತನಿಖಾ ಸಂಸ್ಥೆಗಳ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸಿಟ್ಟು ಪ್ರದರ್ಶಿಸಿದರು.
ಪ್ರತಿಭಟನೆ ವೇಳೆ ಕಾರ್ಯಕರ್ತರು ಮತ್ತು ಖಾಕಿ ಪಡೆ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.ದೆಹಲಿಯ ಪಶ್ಚಿಮ ಭಾಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ವ್ಯಾಪಕ ಭದ್ರತೆ ಕೈಗೊಂಡಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆಲವೆಡೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಇದು ನಾಟಕೀಯ ವಿದ್ಯಮಾನಕ್ಕೆ ಸಾಕ್ಷಿಯಾಯಿತು.